ಕಾಂಗ್ರೆಸ್ ಹಿಂದೂಗಳ ಪರ ನಿಲ್ಲುತ್ತದೆ. ಹಿಂದೂಗಳ ನಂಬಿಕೆಗೆ ಧಕ್ಕೆಯಾಗುವ ಯಾವುದೇ ಕ್ರಮವನ್ನೂ ವಿರೋಧಿಸುತ್ತದೆ ಎಂದು ಕೇರಳ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತಾಲ ಅವರು ಗುಡುಗಿದ್ದಾರೆ. ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಮೀನಾ ಮೇಷ ಎಣಿಸುತ್ತಿರುವ ಪಿಣರಾಯಿ ವಿಜಯನ್ ಅವರ ಕಮ್ಯುನಿಸ್ಟ್ ಸರ್ಕಾರದ ವಿರುದ್ಧ ಕೆಂಡ ಕಾರಿದ ಅವರು ಹಿಂದೂಗಳ ನಂಬಿಕೆಯನ್ನು ಎತ್ತಿ ಹಿಡಿಯಲು ಅನುಕೂಲವಾಗುವ ಕಾನೂನೊಂದನ್ನು ರಚಿಸಬೇಕು ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರ ಜೊತೆ ಸಭೆ ನಡೆಸಿದ ನಂತರ ಅವರು ಹೀಗೆ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಪಿಣರಾಯಿ ವಿಜಯನ್ ಅವರ ಸರ್ಕಾರ ಹಿಂದೂಗಳ ನಂಬಿಕೆಗಳು ಹಾಗೂ ಸಂಪ್ರದಾಯಗಳ ವಿಚಾರದಲ್ಲಿ ಮೂಗು ತೂರಿಸುತ್ತಿದೆ ಎಂದು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಗಂಭೀರ ಆರೋಪ ಮಾಡಿದೆ.
ಅದರ ಜೊತೆ ಜೊತೆಗೇ ಅವರು ಶಬರಿಮಲೆಯ ದೇವಾಲಯದಲ್ಲಿ ಹಿಂದೂ ಸಂಪ್ರದಾಯಗಳನ್ನು ಉಳಿಸಿಕೊಳ್ಳುವ ಸಲುವಾಗಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಹಿಂದೂಗಳ ನಂಬಿಕೆಯ ಪರವಾಗಿ ಚಳುವಳಿಯನ್ನು ಹಮ್ಮಿಕೊಂಡಿದ್ದು, ಈ ವಿಚಾರದಲ್ಲಿ ಹಿಂದೂಗಳ ನಂಬಿಕೆಯನ್ನು ಸಂಪೂರ್ಣವಾಗಿ ಪುರಸ್ಕರಿಸುವವರೆಗೂ ಚಳುವಳಿಯನ್ನು ನಿಲ್ಲಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಪಿಣರಾಯಿ ವಿಜಯನ್ ಅವರ ಕಮ್ಯುನಿಸ್ಟ್ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸದಿದ್ದರೆ ಕಾಂಗ್ರೆಸ್ ಪಕ್ಷವೇ ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಅವರು ಹೇಳಿದ್ದು ಈಗಾಗಲೇ ಸರ್ವೋಚ್ಚ ನ್ಯಾಯಾಲಯದಲ್ಲಿ ಹಿರಿಯ ನ್ಯಾಯವಾದಿಗಳೂ ಆಗಿರುವ ಕಾಂಗ್ರೆಸ್ ಪಕ್ಷದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಅವರೊಂದಿಗೆ ಮಾತುಕತೆ ನಡೆದಿರುವುದಾಗಿ ತಿಳಿಸಿದ್ದಾರೆ.
ಶಾಸಕರಾದ ಅಡೂರ್ ಪ್ರಕಾಶ್, ಎಲ್ಡೋಸ್ ಕುಂಞಪ್ಪಲ್ಲಿ, ಜಿಲ್ಲಾ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾದ ಬಾಬು ಜಾರ್ಜ್, ಉಪಾಧ್ಯಕ್ಷರಾದ ವೇತ್ತೂರು ಜ್ಯೋತಿ ಪ್ರಸಾದ್, ಕೇರಳ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾರ್ಯದರ್ಶಿಗಳಾದ ಪಜ್ಹಾಕುಲಂ ಮಧು ಮುಂತಾದವರೊಂದಿಗೆ ಅವರು ಮಾತನಾಡುತ್ತಿದ್ದರು.
ತೀರ್ಪು ಏನೇ ಬಂದಿದ್ದರೂ, ಮುಂದೆ ತೀರ್ಪು ಬದಲಾದರೂ ಅಥವಾ ಆಗದಿದ್ದರೂ ಪ್ರಸ್ತುತ ಕಾಂಗ್ರೆಸ್ ಪಕ್ಷ ತೆಗೆದುಕೊಂಡಿರುವ ಈ ನಿಲುವು ದೇಶದ ಹಿಂದೂಗಳ ಪಾಲಿಗೆ ಅತಿ ದೊಡ್ಡ ನೈತಿಕ ಗೆಲುವೆಂದರೆ ತಪ್ಪಾಗಲಾರದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.