ನವದೆಹಲಿ: ಕಾಶ್ಮೀರ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ಆಹ್ವಾನವನ್ನು ನೀಡಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಂಗಳವಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮೋದಿ ನನಗೆ ಆಹ್ವಾನ ನೀಡಿದ್ದರು ಎಂಬ ಟ್ರಂಪ್ ಹೇಳಿಕೆಯ ಹಿನ್ನಲೆಯಲ್ಲಿ ಅವರು ಈ ಸ್ಪಷ್ಟನೆಯನ್ನು ನೀಡಿದ್ದಾರೆ.
ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡಿದ ಜೈಶಂಕರ್, ಟ್ರಂಪ್ ಅವರ ಹೇಳಿಕೆಯನ್ನು ಸಾರಸಗಟಾಗಿ ತಳ್ಳಿ ಹಾಕಿದ್ದಾರೆ ಮತ್ತು ಮೋದಿಯವರು ಎಂದೂ ಅಂತಹ ಆಹ್ವಾನವನ್ನು ಟ್ರಂಪ್ ಅವರಿಗೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
“ಶಿಮ್ಲಾ ಒಪ್ಪಂದ ಮತ್ತು ಲಾಹೋರ್ ಘೋಷಣೆ ಭಾರತ ಮತ್ತು ಪಾಕಿಸ್ಥಾನದ ನಡುವಿನ ಎಲ್ಲಾ ಸಮಸ್ಯೆಗಳನ್ನು ದ್ವಿಪಕ್ಷೀಯವಾಗಿ ಪರಿಹರಿಸಲು ಆಧಾರವನ್ನು ಒದಗಿಸುತ್ತದೆ” ಎಂದರು.
“ಪ್ರಧಾನಿ ಮೋದಿಯವರು ಅಂತಹ ಯಾವುದೇ ವಿನಂತಿಯನ್ನು ಮಾಡಿಲ್ಲ ಎಂದು ನಾನು ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ. ಪಾಕಿಸ್ಥಾನದೊಂದಿಗಿನ ಎಲ್ಲಾ ಸಮಸ್ಯೆಗಳನ್ನು ದ್ವಿಪಕ್ಷೀಯವಾಗಿ ಮಾತ್ರ ಚರ್ಚಿಸಬೇಕು ಎಂಬುದು ಭಾರತದ ಸ್ಥಿರ ನಿಲುವು. ಪಾಕಿಸ್ಥಾನದೊಂದಿಗಿನ ಯಾವುದೇ ಮಾತುಕತೆಗೂ ಮುನ್ನ ಗಡಿಯಾಚೆಗಿನ ಭಯೋತ್ಪಾದನೆ ಕೊನೆಗೊಳ್ಳುವ ಅಗತ್ಯವಿದೆ” ಎಂದಿದ್ದಾರೆ.
ಅದಕ್ಕೂ ಮುನ್ನ ಟ್ರಂಪ್ ಹೇಳಿಕೆಯ ಬಗ್ಗೆ ಟ್ವಿಟ್ ಮಾಡಿರುವ ವಿದೇಶಾಂಗ ವ್ಯವಹಾರ ವಕ್ತಾರ ರವೀಶ್ ಕುಮಾರ್ ಅವರು, “ಕಾಶ್ಮೀರ ವಿಷಯದಲ್ಲಿ ಭಾರತ ಮತ್ತು ಪಾಕಿಸ್ಥಾನ ಬಯಸಿದರೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷರು ಪತ್ರಿಕೆಗಳಿಗೆ ನೀಡಿದ ಹೇಳಿಕೆಯನ್ನು ನಾವು ನೋಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಿಗೆ ಅಂತಹ ಯಾವುದೇ ಮನವಿಯನ್ನು ಮಾಡಿಲ್ಲ ”ಎಂದು ಸ್ಪಷ್ಟಪಡಿಸಿದ್ದರು.
ಟ್ರಂಪ್ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಪ್ರತಿಪಕ್ಷಗಳು ಗದ್ದಲವೆಬ್ಬಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.