ಬೆಂಗಳೂರು: ಕರ್ನಾಟಕ ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಬಿಜೆಪಿಯ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಶ್ವೇಶ್ವರ ಕಾಗೇರಿ ಅವರು ಮಂಗಳವಾರ 11.30ರ ಸುಮಾರಿಗೆ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದರು. ನಾಮಪತ್ರ ಸಲ್ಲಿಸಲು ಮಂಗಳವಾರ ಮಧ್ಯಾಹ್ನ 12 ಗಂಟೆ ವರೆಗೆ ಕಾಲಾವಕಾಶವಿತ್ತು. ಕಾಗೇರಿ ಅವರನ್ನು ಹೊರತುಪಡಿಸಿ ಬೇರೆ ಯಾರೂ ಸ್ಪೀಕರ್ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಕೆ ಮಾಡದ ಹಿನ್ನಲೆಯಲ್ಲಿ ಅವರನ್ನು ಇಂದು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಬುಧವಾರ ಸದನದಲ್ಲಿ ಕಾಗೇರಿ ಅವರ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದ್ದು, ಕಾಗೇರಿ ಅವರು ಸ್ಪೀಕರ್ ಸ್ಥಾನದಲ್ಲಿ ಕುಳಿತು ಕಾರ್ಯರಂಭ ಮಾಡಿದ್ದಾರೆ.
ಕಾಗೇರಿ ಅವರು ಸಕ್ರಿಯ ರಾಜಕಾರಣಕ್ಕೆ ಪ್ರವೇಶ ಮಾಡಿದ್ದು 1990ರಲ್ಲಿ. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
1994ರಲ್ಲಿ ಅಂಕೋಲಾ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದು, ಸತತ ಮೂರು ಬಾರಿ ಅಂಕೋಲಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2008, 2013 ಮತ್ತು 2018ರ ವಿಧಾನಸಭೆ ಚುನಾವಣೆಗಳಲ್ಲಿ ಶಿರಸಿ ಮತ್ತು ಸಿದ್ದಾಪುರ ಕ್ಷೇತ್ರದಿಂದ ಅವರು ಆಯ್ಕೆಯಾಗಿ ಬಂದಿದ್ದಾರೆ. 2006ರಲ್ಲಿ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿದ್ದರು. 2008ರಲ್ಲಿ ಬಿಜೆಪಿ ಸರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಮಾಜಿ ಸ್ಪೀಕರ್ ಬೋಪಯ್ಯ ಅವರನ್ನು ಈ ಬಾರಿಯೂ ಬಿಜೆಪಿ ಸ್ಪೀಕರ್ ಮಾಡಲಿದೆ ಎಂದು ಹೇಳಲಾಗಿತ್ತು. ಆದರೆ ಅಂತಿಮವಾಗಿ ಕಾಗೇರಿ ಅವರು ಸ್ಪೀಕರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.