ನವದೆಹಲಿ : ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿ ಜಮ್ಮು-ಕಾಶ್ಮೀರದ ವಿಶೇಷ ಅಧಿಕಾರವನ್ನು ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ದೇಶದಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿತ್ತು. ಇದೀಗ ಬಿಜೆಪಿಯು 370ನೇ ವಿಧಿಯ ಬಗ್ಗೆ ದೇಶದಾದ್ಯಂತ ಅರಿವು ಮೂಡಿಸುವ ಸಲುವಾಗಿ ಜನ ಜಾಗರಣ ಅಭಿಯಾನವನ್ನು ಹಮ್ಮಿಕೊಳ್ಳಲು ಮುಂದಾಗಿದೆ.
ದೇಶದ ಸಿನಿಮಾ, ಮಾಧ್ಯಮ, ಕ್ರೀಡೆ ಮುಂತಾದ ಹಲವು ಕ್ಷೇತ್ರಗಳ 2000ಕ್ಕೂ ಅಧಿಕ ಜನರನ್ನು ಭೇಟಿಯಾಗಿ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಸರಕಾರದ ನಿರ್ಧಾರದ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡಲಿದೆ.
ಜನ ಜಾಗರಣ ಅಭಿಯಾನದ ಜೊತೆಗೆ ಒಳಾಂಗಣ ಸಭೆಗಳು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇಂತಹ ಕೆಲವು ಸಭೆಗಳು ಗೃಹಸಚಿವ ಮತ್ತು 370ನೇ ವಿಧಿ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರವಹಿಸಿದ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆಯಲಿದೆ.
ಅಭಿಯಾನವನ್ನು ನಡೆಸುವುದಕ್ಕಾಗಿ ಪಕ್ಷದ ಹಿರಿಯ ಮುಖಂಡರಾದ ಪ್ರಹ್ಲಾದ್ ಜೋಶಿ, ಗಜೇಂದ್ರ ಸಿಂಗ್ ಶೇಖಾವತ್, ಧರ್ಮೇಂದ್ರ ಪ್ರಧಾನ್ ಮತ್ತು ಜಿತೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ.
ಮಾಜಿ ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್, ಲಡಾಕ್ ಸಂಸದ ಸೇರಿಂಗ್ ನಮಗ್ಯಾಲ್, ಬೆಂಗಳೂರು ಸಂಸದ ತೇಜಸ್ವಿಸೂರ್ಯ ಸಮಿತಿಯ ಸದಸ್ಯರಾಗಲಿದ್ದಾರೆ.
ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಅವರು ಕಮಿಟಿಯನ್ನು ಮುನ್ನಡೆಸಲಿದ್ದಾರೆ ಮತ್ತು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ಸಮಿತಿಯ ಉಪಾಧ್ಯಕ್ಷರಾಗಲಿದ್ದಾರೆ. ಬೈಜಯಂತ್ ಪಾಂಡ ಮತ್ತು ರಾಷ್ಟ್ರೀಯ ಕಾರ್ಯದರ್ಶಿ ವೈ. ಸತ್ಯ ಕುಮಾರ್ ಅವರು ಸಮಿತಿಯ ಸದಸ್ಯರಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.