ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡೂ ರಾಜ್ಯಗಳ ಜನತೆಗೆ ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ. ಅಲ್ಲದೇ, ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯಲು ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಮತ್ತು ನಾಯಕರುಗಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಎರಡೂ ರಾಜ್ಯಗಳ ಫಲಿತಾಂಶ ಹೊರಬಿದ್ದ ಬಳಿಕ ನವದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, “ವಿಧಾನಸಭಾ ಚುನಾವಣಾ ಗೆಲುವು ನಿಜಕ್ಕೂ ಅಭೂತಪೂರ್ವ. ಯಾಕೆಂದರೆ ಇತ್ತೀಚಿನ ವರ್ಷಗಳಲ್ಲಿ ಕೆಲವೇ ಕೆಲವು ಸರ್ಕಾರಗಳು ಮಾತ್ರ ಮರು ಆಯ್ಕೆಯಾಗುತ್ತವೆ. ಇಂತಹ ಸಂದರ್ಭದಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸುವುದು ನಿಜಕ್ಕೂ ಮಹತ್ವದ್ದು” ಎಂದಿದ್ದಾರೆ.
“ದೀಪಾವಳಿಗೂ ಮುಂಚಿತವಾಗಿ ನಮಗೆ ಶುಭವಾಗಿದೆ. ನಮ್ಮ ಮೇಲೆ ಹರಿಯಾಣ ಮತ್ತು ಮಹಾರಾಷ್ಟ್ರದ ಜನರು ಮತ್ತೊಮ್ಮೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಮತ್ತೆ ಐದು ವರ್ಷಗಳ ಕಾಲ ಅಭಿವೃದ್ಧಿಯ ಪರ್ವವನ್ನು ಮುಂದುವರೆಸಲು ನಮಗೆ ಅವಕಾಶ ನೀಡಿದ್ದಾರೆ. ಅವರಿಗೆ ನಮ್ಮ ಧನ್ಯವಾದಗಳು” ಎಂದಿದ್ದಾರೆ.
“ಹರಿಯಾಣದಲ್ಲಿ ಒಮ್ಮೆ ಆರಿಸಿ ಬಂದ ಸರ್ಕಾರ ಇನ್ನೊಮ್ಮೆ ಆರಿಸಿ ಬಂದಿದ್ದು ಬಹಳ ಅಪರೂಪ. ಇಂತಹ ಸಂದರ್ಭದಲ್ಲಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಸರ್ಕಾರ ಮತ್ತೊಮ್ಮೆ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಿಜಕ್ಕೂ ಇದು ಅಭೂತಪೂರ್ವ ಸಾಧನೆ. ಮಹಾರಾಷ್ಟ್ರದಲ್ಲೂ ಕೂಡ ದೇವೇಂದ್ರ ಫಡ್ನವಿಸ್ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಅಲ್ಲಿ ಒಂದು ಸಿಎಂ ಐದು ವರ್ಷಗಳ ಕಾಲ ಪೂರ್ಣಾವಧಿ ಸೇವೆ ಸಲ್ಲಿಸಿಯೇ ಇಲ್ಲ. ಇಂತಹ ಸಂದರ್ಭದಲ್ಲಿ ಅವರು ಐದು ವರ್ಷಗಳನ್ನು ಪೂರೈಸಿ ಮತ್ತೊಂದು ಅವಧಿಗೆ ಪುನರಾಯ್ಕೆಯಾಗಿದ್ದಾರೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಬಿಜೆಪಿ ಪರಂಪರೆಗೆ ಸಿಕ್ಕ ಜಯ ಇದು” ಎಂದಿದ್ದಾರೆ.
ಹರಿಯಾಣ ಮತ್ತು ಮಹಾರಾಷ್ಟ್ರ ಎರಡರಲ್ಲೂ ಬಿಜೆಪಿ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನಾ ಮೈತ್ರಿ ಸರ್ಕಾರ ರಚನೆ ಮಾಡುವುದು ಸ್ಪಷ್ಟವಾಗಿದೆ. ಆದರೆ ಹರಿಯಾಣದಲ್ಲಿ ಅತಂತ್ರ ಪರಿಸ್ಥಿತಿ ಇದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.