ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆಗಟ್ಟುವಿಕೆ) ತಿದ್ದುಪಡಿ ಕಾಯ್ದೆ 2018ರ ಸಾಂವಿಧಾನಿಕ ಮಾನ್ಯತೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
“ಈ ಕಾಯ್ದೆಯ ಅಡಿಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಲು ಪ್ರಾಥಮಿಕ ತನಿಖೆ ನಡೆಸಬೇಕಾದ ಅಗತ್ಯವಿಲ್ಲ. ಹಿರಿಯ ಪೊಲೀಸ್ ಅಧಿಕಾರಿಯ ಅನುಮತಿಯೂ ಬೇಕಾಗಿಲ್ಲ” ಎಂದು ನ್ಯಾಯಪೀಠ ಹೇಳಿದೆ. ನ್ಯಾಯಮೂರ್ತಿ ಅರುಣಾ ಮಿಶ್ರಾ ಪೀಠದ ನೇತೃತ್ವವನ್ನು ವಹಿಸಿದ್ದಾರೆ.
ಈ ಕಾಯ್ದೆಯಡಿ ನಿರೀಕ್ಷಣಾ ಜಾಮೀನಿಗೆ ಅವಕಾಶವಿಲ್ಲ, ಆದರೆ ಈ ಕಾಯ್ದೆಯಡಿ ದಾಖಲಾಗುವ ಎಫ್ ಐಆರ್ ಅನ್ನು ವಿಶೇಷ ಸಂದರ್ಭಗಳಲ್ಲಿ ರದ್ದುಪಡಿಸುವ ಅಧಿಕಾರ ನ್ಯಾಯಾಲಯಕ್ಕೆ ಇದೆ ಎಂದಿದೆ.
2018ರಲ್ಲಿ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್, “ಪರಿಶಿಷ್ಟ ಜಾತಿ ಮತ್ತು ಪಂಗಡದ ವಿರುದ್ಧ ತಾರತಮ್ಯ ನಿವಾರಣೆಗಾಗಿ ಬಂದ ಕಾಯ್ದೆಯು ಮುಗ್ಧರನ್ನು ಬ್ಲ್ಯಾಕ್ ಮೇಲ್ಗೆ ಒಳಪಡಿಸುವ ಅಸ್ತ್ರವಾಗಿದೆ. ಈ ಕಾಯ್ದೆಯಡಿ ದಾಖಲಾದ ಪ್ರಕರಣದಡಿ ಬಂಧನ ನಡೆಸಲು ಜಿಲ್ಲಾ ವರಿಷ್ಠಾಧಿಕಾರಿಯ ಅನುಮತಿ ಪಡೆಯಬೇಕು” ಎಂದಿತ್ತು.
ಇದು ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿ ಹಿಂಸಾರೂಪಕ್ಕೆ ತಿರುಗಿ ಹಲವರು ಪ್ರಾಣ ಕಳೆದುಕೊಂಡಿದ್ದರು, ಇನ್ನು ಹಲವರಿಗೆ ಗಾಯಗಳಾಗಿದ್ದವು. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ತೀರ್ಪು ಅನುಷ್ಠಾನಕ್ಕೆ ಬಾರದಂತೆ ತಡೆಯಲು ಎಸ್ಸಿ/ಎಸ್ಟಿ (ದೌರ್ಜನ್ಯ ತಡೆಗಟ್ಟುವಿಕೆ) ತಿದ್ದುಪಡಿ ಕಾಯ್ದೆ 2018 ಅನ್ನು ಜಾರಿಗೆ ತಂದಿತ್ತು.
ಕೇಂದ್ರ ಸರ್ಕಾರದ ಈ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕಾಯ್ದೆಯ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಹಿಡಿದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.