ಬೆಂಗಳೂರು: ಕರ್ನಾಟಕದ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಕೊಲೆಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಗುರುವಾರ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ವಿನಾಯಕ ಕಟಗಿ, ಮುದುಕ್ಕಪ್ಪ, ಕೀರ್ತಿ ಮತ್ತು ಸಂದೀಪ ಅಕಾ ಸ್ಯಾಂಡಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಸಿನಿಮೀಯ ಮಾದರಿಯಲ್ಲಿ ದಾಳಿ ನಡೆಸಿ ಸಿಬಿಐ ಅಧಿಕಾರಿಗಳು ಕೊಲೆ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧನ ಭೀತಿಯಲ್ಲಿದ್ದ ಆರೋಪಿಗಳು ತಮಿಳುನಾಡಿಗೆ ಪರಾರಿಯಾಗುತ್ತಿದ್ದ ವೇಳೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರು ಬೆಂಗಳೂರು, ತಮಿಳುನಾಡು ಮೂಲದವರಾಗಿದ್ದು, ಇವರು ಸುಪಾರಿ ಹಂತಕರು ಎಂದು ಹೇಳಲಾಗಿದೆ. ಇವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ರಾತ್ರಿ ವೇಳೆಗೆ ಧಾರವಾಡ ನಾಲ್ಕನೇ ಹೆಚ್ಚುವರಿ ನ್ಯಾಯಾಧೀಶರ ನಿವಾಸಕ್ಕೆ ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಕರೆತಂದಿದ್ದರು.
2017ರ ಜೂನ್ 15ರಂದು ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಬೆಳಗ್ಗೆ ಜಿಮ್ಗೆ ಆಗಮಿಸಿದ್ದ ಯೋಗೇಶ್ ಗೌಡರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮೇಲೆ ಕೊಲೆ ಆರೋಪ ಬಂದಿತ್ತು. ಈ ಬಗ್ಗೆ ತನಿಖೆಯಲ್ಲಿ ಕರ್ನಾಟಕ ಸರ್ಕಾರ 2019 ರ ಸೆಪ್ಟೆಂಬರ್ 9 ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಸಿಬಿಐ 6 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿತ್ತು. ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಶಿವಪ್ಪ ಸಿಬಿಐ ತನಿಖೆ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿತ್ತು. ಇದನ್ನು ಸಿಬಿಐ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಪ್ರಸ್ತುತ ಸುಪ್ರೀಂಕೋರ್ಟ್ ತನಿಖೆಯ ತಡೆಯಾಜ್ಞೆಯನ್ನು ತೆರೆವುಗೊಳಿಸಿ ತನಿಖೆ ಮುಂದುವರೆಸಲು ಅನುಮತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.