ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಬ್ಬ ಹರಿದಿನಗಳು ಬಂದರೂ ಯಾವುದೇ ವಿನಾಯಿತಿ ನೀಡಲಾಗುವುದಿಲ್ಲ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಇನ್ನೇನು ಸಾಲು ಸಾಲು ಹಬ್ಬಗಳು ಬರಲಿವೆ. ಎಲ್ಲಾ ಧರ್ಮಗಳಿಗೆ ಸಂಬಂಧಿಸಿದಂತೆಯೂ ಹಬ್ಬಗಳು ಬರಲಿವೆ. ಈ ಸಂದರ್ಭದಲ್ಲಿ ಕೊರೋನಾ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗದು ಎಂದು ಸಚಿವರು ತಿಳಿಸಿದ್ದಾರೆ. ಯಾವ ಹಬ್ಬಕ್ಕೂ ಯಾವುದೇ ರಿಯಾಯಿತಿ ನೀಡಲಾಗದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರು, ಅಧಿಕಾರಿಗಳ ಜೊತೆಗೆ ಅಗತ್ಯ ಚರ್ಚೆ ನಡೆಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ. ಇದಕ್ಕಾಗಿ ನಿಯೋಗವನ್ನೂ ರಚನೆ ಮಾಡಲಾಗಿದೆ. ಸೋಂಕು ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದಾದ ಎಲ್ಲಾ ಆಡಳಿತಾತ್ಮಕ ಕ್ರಮಗಳನ್ನೂ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯಾಗುವ ಪ್ರಮಾಣ ಹೆಚ್ಚಾಗಿದೆ. ಆದ್ದರಿಂದ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವುದು ಅತ್ಯಗತ್ಯ. ಇಲ್ಲವಾದಲ್ಲಿ ಪರಿಸ್ಥಿತಿ ಕೈ ಮೀರಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಅಂತರಾಜ್ಯ ಪ್ರಯಾಣಿಕರಿಗೆ ಇ ಪಾಸ್ ಕಡ್ಡಾಯ ಎಂಬುದಾಗಿಯೂ ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ. ಕೊರೋನಾ ನಿಯಂತ್ರಣ ದೃಷ್ಟಿಯಿಂದ 2 ಸಾವಿರ ಹೋಮ್ ಗಾರ್ಡ್ಗಳನ್ನೂ ನಿಯೋಜನೆ ಮಾಡಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.