ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಡಿಎಚ್ಒ ಗಳ ಜೊತೆಗೆ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಆರ್. ಅಶೋಕ್, ಡಾ ಕೆ ಸುಧಾಕರ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಸೋಂಕು ಹೆಚ್ಚಾದರೆ ಜಿಲ್ಲಾಧಿಕಾರಿಗಳೇ ಹೊಣೆಯಾಗುತ್ತಾರೆ. ಡಿಸಿಗಳ ಅನುದಾನವನ್ನು ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಬಳಕೆ ಮಾಡಿ. ಯಾವುದೇ ಸಮಸ್ಯೆಗಳು ಎದುರಾದಲ್ಲಿಯೂ ಆ ಬಗ್ಗೆ ಡಿಸಿಗಳೇ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಸಿದ್ಧವಿರುವುದಾಗಿಯೂ ಸಚಿವತ್ರಯರು ಹೇಳಿದ್ದಾರೆ. ಜೊತೆಗೆ ಟೆಸ್ಟಿಂಗ್, ಟ್ರೇಸಿಂಗ್ ಸೇರಿದಂತೆ ಇನ್ನಿತರ ನಿಯಂತ್ರಣಕ್ಕೆ ಪೂರಕವೆನಿಸಿದ ಕ್ರಮಗಳ ಅನುಸರಣೆ ಸರಿಯಾಗಿ ಆಗುತ್ತಿಲ್ಲ. ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದಾರೆ. ಜೊತೆಗೆ ಸರ್ಕಾರ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆಯೂ ಸಭೆಯಲ್ಲಿ ಹೇಳಲಾಗಿದೆ. ರಾಜ್ಯದಲ್ಲಿ ಜಾತ್ರೆ ಸೇರಿದಂತೆ ಇನ್ನಿತರ ಯಾವುದೇ ಹೆಚ್ಚು ಜನಸಂದಣಿಯಾಗುವ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ಈ ಸಂಬಂಧ ಜನರಿಗೆ ಮನವರಿಕೆ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂದಿನಿಂದ ಬುಕ್ ಆಗುವ ಸಮಾರಂಭಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂದು ಸಭೆಯಲ್ಲಿ ತಿಳಿಸಿದ್ದಾರೆ.
ಇನ್ನು ಮದುವೆ ಸಮಾರಂಭಕ್ಕೆ ಪಾಸ್ ಕಡ್ಡಾಯ. ಛತ್ರಗಳೂ ಕಡ್ಡಾಯವಾಗಿ ಪಾಸ್ ಪಡೆಯಬೇಕು. ನಿಯಮ ಪಾಲನೆಯಾಗದೇ ಹೋದಲ್ಲಿ ಅಂತಹ ಛತ್ರಗಳ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಜೊತೆಗೆ ಕೊರೋನಾ ಸಂಬಂಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಎಲ್ಲಾ ಜವಾಬ್ದಾರಿಯನ್ನು ಸರ್ಕಾರ ಜಿಲ್ಲಾಧಿಕಾರಿಗಳಿಗೆ ನೀಡಿ ಆದೇಶ ಹೊರಡಿಸಲಾಗಿದೆ.
ಕೊರೋನಾ ಸಂಬಂಧ ಡಾಟಾ ಎಂಟ್ರಿ ನಡೆಸಲು ಸೂಕ್ತ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಸೂಚಿಸಿದ್ದಾರೆ. ಗುತ್ತಿಗೆ ಆಧಾರಿತ ಸಿಬ್ಬಂದಿಗಳಿಗೆ ವೇತನ ನೀಡುವಂತೆಯೂ ಸಭೆಯಲ್ಲಿ ತಿಳಿಸಲಾಗಿದೆ. ಹಾಗೆಯೇ ಕೊರೋನಾ ನಿಯಂತ್ರಣ ಸಂಬಂಧ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಕ್ರಮ ವಹಿಸುವಂತೆಯೂ ಅಧಿಕಾರಿಗಳಿಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ರೆಮಿಡಿಸ್ವಿರ್ ಔಷಧಕ್ಕೆ ಕೊರತೆ ಇಲ್ಲ. ಈ ಸಂಬಂಧ ಯಾವುದೇ ಆತಂಕ ಬೇಡ ಎಂದು ತಿಳಿಸಿದ್ದಾರೆ.
ಜನತೆ ಕೊರೋನಾವನ್ನು ಗಂಭೀರವಾಗಿ ಪರಿಗಣಿಸದ ಕಾರಣದಿಂದಾಗಿ ಸೋಂಕು ವ್ಯಾಪಿಸುವ ವೇಗ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜನತೆ ಎಚ್ಚೆತ್ತುಕೊಂಡು ಅಗತ್ಯ ಕ್ರಮಗಳನ್ನು ಅನುಸರಿಸುವಂತೆಯೂ ಸರ್ಕಾರದ ಪರವಾಗಿ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.