ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದರು. ಕೊರೋನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಡಿಯೋ ಕಾಸ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದರು.
ರಾಜ್ಯ ಸರ್ಕಾರ ಸಚಿವರುಗಳು, ಶಾಸಕರು, ತಜ್ಞರು, ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಸಂಬಂಧಿಸಿದಂತೆ ಯಾವೆಲ್ಲಾ ಕಠಿಣ ನಿಯಂತ್ರಣಗಳನ್ನು ಹೇರಬಹುದು?, ಸಂಪೂರ್ಣ ರಾಜ್ಯಕ್ಕೆ ಸಂಬಂಧಿಸಿದಂತೆ ಯಾವ ಕ್ರಮಗಳನ್ನು ಕೈಗೊಳ್ಳುವುದು ಸಾಧ್ಯ ಎಂಬುದರ ಬಗ್ಗೆ ಚರ್ಚಿಸಲಾಯಿತು. ತಜ್ಞರ ವರದಿಯನ್ನು ಆಧರಿಸಿಕೊಂಡು ಸರ್ಕಾರ ಈ ಕ್ರಮಗಳನ್ನು ಅನುಷ್ಠಾನಕ್ಕೆ ತರಲಿದೆ ಎಂದು ಮೂಲಗಳು ಹೇಳಿವೆ.
ಸೋಂಕಿತರ ಚಿಕಿತ್ಸೆಗೆ ಪೂರಕವಾಗುವಂತೆ ರಾಜ್ಯದಲ್ಲಿ ಅಗತ್ಯವಿರುವ ಆಕ್ಸಿಜನ್ ವ್ಯವಸ್ಥೆ ಮಾಡುವುದಕ್ಕೆ ಸಂಬಂಧಿಸಿದಂತೆಯೂ ಈ ಸಭೆಯಲ್ಲಿ ಚರ್ಚೆ ನಡೆದಿದೆ. ಬೆಂಗಳೂರಿಗೆ ಸಂಬಂಧಿಸಿದಂತೆ ಹೆಚ್ಚು ಜನಜಂಗುಳಿ ಸೇರುವ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ಹೊಟೇಲ್, ರೆಸ್ಟೋರೆಂಟ್ಗಳಲ್ಲಿ ಕೇವಲ ಪಾರ್ಸೆಲ್ಗೆ ಮಾತ್ರ ಅವಕಾಶ, ಪಾರ್ಕ್, ಜಿಮ್, ಸ್ವಿಮ್ಮಿಂಗ್ ಫೂಲ್ ಬಂದ್, ಬಾರ್, ಪಬ್ಗಳನ್ನು ಮುಚ್ಚುವಂತೆಯೂ ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮದುವೆ ಸಮಾರಂಭಗಳಿಗೂ ಬ್ರೇಕ್ ಹಾಕಿ ಸರ್ಕಾರ ಆದೇಶ ಹೊರಡಿಸಿದೆ. ಹಾಗೆಯೇ ಹೊರಗಿನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಜನರಿಗೆ ಕಡಿವಾಣ ಹಾಕಿದಲ್ಲಿ ಕೊರೋನಾ ಹತೋಟಿಗೆ ತರುವುದು ಸಾಧ್ಯ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಮಾಸ್ಕ್, ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಎಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ. ಮಾಲ್ಗಳನ್ನು ತೆರೆಯಲಾಗುತ್ತದೆ. ಆದರೆ ಕಠಿಣ ನಿಯಮಗಳನ್ನು ಅನುಸರಿಸಿಕೊಂಡೇ ಮಾಲ್ಗಳನ್ನು ತೆರೆಯುವಂತೆಯೂ ಸೂಚಿಸಲಾಗಿದೆ. ನಾಳೆಯಿಂದ ತೊಡಗಿದಂತೆ ನೈಟ್ ಕರ್ಪ್ಯೂ ಸಮಯವನ್ನು ಸಹ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ ರಾತ್ರಿ 8 ರಿಂದ ಬೆಳಗ್ಗೆ 6 ರ ವರೆಗೆ ಕರ್ಪ್ಯೂ ಅವಧಿಯನ್ನು ವಿಸ್ತರಿಸುವ ಚಿಂತನೆಗಳೂ ನಡೆದಿವೆ. ಇನ್ನು ಬಿಬಿಎಂಪಿ ವ್ಯಾಪ್ತಿಗೆ ಸಂಬಂಧಿಸಿದಂತೆ 144 ಸೆಕ್ಷನ್ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. 4 ಕ್ಕಿಂತ ಅಧಿಕ ಮಂದಿ ಒಂದು ಕಡೆ ಸೇರುವಂತಿಲ್ಲ ಎಂಬುದಾಗಿಯೂ ಸಿಎಂ ತಮ್ಮ ಆದೇಶದಲ್ಲಿ ಪ್ರಕಟಿಸಿದ್ದಾರೆ. ಜೊತೆಗೆ ಹೊಸ ಗೈಡ್ಲೈನ್ಸ್ ಜಾರಿಗೆ ಸಂಬಂಧಿಸಿದಂತೆಯೂ ಸಿಎಂ ಜೊತೆಗೆ ಸಚಿವರ ಪ್ರತ್ಯೇಕ ಸಮಾಲೋಚನೆ ನಡೆಸಲಾಗಿದೆ. ನಾಳೆಯಿಂದ ತೊಡಗಿದಂತೆ ನೂತನ ಮಾರ್ಗಸೂಚಿಗಳು ಅನ್ವಯವಾಗಲಿವೆ ಎಂದು ಸಭೆಯಲ್ಲಿ ತಿಳಿಸಲಾಗಿದೆ. ಈ ಸಂಬಂಧ ಸಚಿವರ ಜೊತೆಗೆ ಮುಖ್ಯಮಂತ್ರಿಗಳು ಮತ್ತೆ ದೂರವಾಣಿ ಮೂಲಕ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ.
ರಾಜ್ಯದಲ್ಲಿ, ಅದರಲ್ಲಿಯೂ ಮುಖ್ಯವಾಗಿ ಬೆಂಗಳೂರು ನಗರದಲ್ಲಿ ಲಾಕ್ಡೌನ್ ಸದ್ಯಕ್ಕೆ ಬೇಡ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಅದರ ಹೊರತಾದಂತೆ ಕಠಿಣ ಕ್ರಮ ಜಾರಿಗೊಳಿಸಲು ಸಭೆಯಲ್ಲಿ ಸಲಹೆಗಳು ಬಂದಿವೆ. ರಾಜ್ಯ ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಲಾಕ್ಡೌನ್ ಹೇರಿದಲ್ಲಿ ಜನರು ಮತ್ತಷ್ಟು ಸಮಸ್ಯೆ ಅನುಭವಿಸುವಂತಾಗುತ್ತದೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಲಾಕ್ಡೌನ್ ಹೇರಿದಲ್ಲಿ ಜನರು ಹಳ್ಳಿಗಳತ್ತ ಮುಖ ಮಾಡುತ್ತಾರೆ. ಈ ಸಂದರ್ಭದಲ್ಲಿ ಕೊರೋನಾ ಸೋಂಕು ಹಳ್ಳಿಗಳಿಗೂ ವ್ಯಾಪಿಸುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.
ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಾದ ಹಾಸಿಗೆ, ವೆಂಟಿಲೇಟರ್ ವ್ಯವಸ್ಥೆಗಳನ್ನು ಹೆಚ್ಚಿಸುವಂತೆಯೂ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಹಾಗೆಯೇ, ಸೋಂಕಿತರ ಮರಣ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿತಾಗಾರಗಳಲ್ಲಿ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ. ವೈದ್ಯಕೀಯ ಸಮಸ್ಯೆಗಳನ್ನು ಮೊದಲು ಪರಿಹಾರ ಮಾಡುವಂತೆಯೂ ಅಭಿಪ್ರಾಯ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣದಲ್ಲಿದೆ. ಪರಿಸ್ಥಿತಿ ಕೈ ಮೀರಿ ಹೋಗಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಜನರು ಅನಗತ್ಯ ಓಡಾಟ ನಡೆಸದೇ ಇದ್ದಲ್ಲಿ ಕೊರೋನಾ ನಿಯಂತ್ರಣ ಸಾಧ್ಯ. ಈ ಹಿನ್ನೆಲೆಯಲ್ಲಿಯೂ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಈ ಸಭೆಯಲ್ಲಿ ಸಲಹೆಗಳು ಬಂದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.