ಮಂಗಳೂರು: ದಕ್ಷಿಣ ಕನ್ನಡದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ತನ್ನ ಸಭಾಂಗಣವನ್ನು ಕೊರೋನಾ ಆರೈಕೆ ಕೇಂದ್ರವನ್ನಾಗಿ ಮಾರ್ಪಾಡು ಮಾಡಿದ್ದು, ಮುಂದಿನ ಎರಡು ದಿನಗಳಲ್ಲಿ ಇಲ್ಲಿ ಸೋಂಕಿತರಿಗೆ ಚಿಕಿತ್ಸೆ ಆರಂಭವಾಗಲಿದೆ.
ರಾಜ್ಯದ ಮುಜರಾಯಿ ಇಲಾಖೆಗೆ ಒಳಪಟ್ಟ ಈ ದೇವಾಲಯ ತನ್ನ ಸಭಾಂಗಣದ ಮೊದಲನೇ ಮಹಡಿಯಲ್ಲಿ ಕೋವಿಡ್ ಆರೈಕೆ ಕೇಂದ್ರ ಆರಂಭಿಸಿದೆ. ಇಲ್ಲಿ ಏಕಕಾಲಕ್ಕೆ ಸುಮಾರು 40 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಅಗತ್ಯ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.
ಈ ಸಂಬಂಧ ಮಾತನಾಡಿರುವ ದೇಗುಲದ ನಿರ್ವಹಣಾ ಸಮಿತಿಯ ಕಾರ್ಯ ನಿರ್ವಹಣಾಧಿಕಾರಿ ಎಚ್ ನವೀನ್ ಭಂಡಾರಿ, ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಕೊರೋನಾ ಸೋಂಕು ತೀವ್ರ ಸ್ವರೂಪ ಪಡೆಯುತ್ತಿದ್ದು, ಇದನ್ನು ಆರೋಗ್ಯ ಇಲಾಖೆ ಗಣನೆಗೆ ತೆಗೆದುಕೊಂಡಿದೆ. ಸೋಂಕಿತ ವ್ಯಕ್ತಿಗಳಿಗೆ ಈ ಆರೈಕೆ ಕೇಂದ್ರಗಳಲ್ಲಿ ವಸತಿ ಕಲ್ಪಿಸಲಾಗುತ್ತದೆ. ಆ ಬಳಿಕ ಅವರ ಆರೋಗ್ಯದ ಬಗ್ಗೆ ನಿಗಾ ಇರಿಸಿ ಗುಣಮುಖರಾದ ಬಳಿಕ, ಅವರ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಬಂದ ಮೇಲೆ ಅವರನ್ನು ಮತ್ತೆ ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತದೆ. ರೋಗ ಲಕ್ಷಣಗಳು ತೀವ್ರ ಸ್ವರೂಪದ್ದಾಗಿದ್ದರೆ ಅವರನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸವನ್ನೂ ಈ ಕೇಂದ್ರದಿಂದಲೇ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಈ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ಸ್ವಯಂಸೇವಕರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕಾಯಕ ಮಾಡುತ್ತಿದ್ದಾರೆ. ಇಲ್ಲಿಗೆ ಪ್ರತಿನಿತ್ಯ ಆರೋಗ್ಯ ಇಲಾಖೆಯ ವೈದ್ಯರು, ದಾದಿಯರು ಭೇಟಿ ನೀಡಿ ಸೋಂಕಿತರ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಇಲ್ಲಿ 40 ಹಾಸಿಗೆಗಳು, ಊಟ ಸೇರಿದಂತೆ ಇನ್ನಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಭಂಡಾರಿ ತಿಳಿಸಿದ್ದಾರೆ. ಅಗತ್ಯ ಬಿದ್ದಲ್ಲಿ ಸಭಾಂಗಣದ ನೆಲಮಹಡಿಯಲ್ಲೂ ಹಾಸಿಗೆ ವ್ಯವಸ್ಥೆ ಕಲ್ಪಿಸಿ ಸೋಂಕಿತರ ಚಿಕಿತ್ಸೆಗೆ ಅನುಕೂಲ ಕಲ್ಪಿಸಲಾಗುವುದು. ಕುಟುಂಬ ಸದಸ್ಯರಿಗೆ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಈ ಆರೈಕೆ ಕೇಂದ್ರ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.