ಬೆಂಗಳೂರು: ರಾಜ್ಯದಲ್ಲಿ ಶಾಲಾರಂಭಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಿಕ್ಷಣ ಇಲಾಖೆ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್ಡೌನ್ ಮುಂದುವರಿದಿರುವ ಹಿನ್ನೆಲೆಯಲ್ಲಿ, ಲಾಕ್ಡೌನ್ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ನಾಳೆಯಿಂದ(ಜೂ.15) ತೊಡಗಿದಂತೆ ಪ್ರಸಕ್ತ ವರ್ಷದ ಶಾಲಾರಂಭದ ಪೂರ್ವಸಿದ್ಧತೆ ಆರಂಭವಾಗುತ್ತದೆ. ಈ ಹಿನ್ನೆಲೆಯಲ್ಲಿ ಸಚಿವರು ಅನ್ಲಾಕ್ ಆದ ಜಿಲ್ಲೆಗಳು ಮತ್ತು ಲಾಕ್ಡೌನ್ ಜಾರಿಯಲ್ಲಿರುವ ಜಿಲ್ಲೆಗಳ ಶಿಕ್ಷಕರು ಭೌತಿಕವಾಗಿ ಶಾಲೆಗಳಿಗೆ ಹಾಜರಾಗುವ ಸಂಬಂಧ ಸುತ್ತೋಲೆ ಹೊರಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಹಾಗೆಯೇ ಪ್ರಥಮ ಪಿಯುಸಿ ಮೌಲ್ಯಾಂಕನ ಪ್ರಕ್ರಿಯೆಯನ್ನು ರಾಜ್ಯ ಸಂಪೂರ್ಣ ಅನ್ಲಾಕ್ ಆಗುವವರೆಗೆ ಸಮಯ ವಿಸ್ತರಿಸಿ ಆದೇಶ ಹೊರಡಿಸಲಾಗುತ್ತದೆ. ಹಾಗೆಯೇ ಎರಡು ದಿನಗಳ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧಿಸಿದಂತೆ ವಜೂ. 28 ರಂದು ಜಿಲ್ಲಾಧಿಕಾರಿಗಳು, ಜಿ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿ, ಬಳಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಮತ್ತು ಇಲಾಖೆಯ ಆಯುಕ್ತರ ಜೊತೆ ಪರೀಕ್ಷಾ ಸಂದರ್ಭದಲ್ಲಿ ತೆಗೆದುಕೊಳ್ಳಬಹುದಾದ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಿ, ಮಾರ್ಗದರ್ಶನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷಾ ಮೇಲ್ವಿಚಾರಕರಿಗೆ ಕೊರೋನಾ ಲಸಿಕೆ ನೀಡುವ ಪ್ರಕ್ರಿಯೆ ಪರೀಕ್ಷೆಗೂ ಮೊದಲೇ ಪೂರ್ಣಗೊಳಿಸಲು ಸೂಚಿಸಲಾಗುತ್ತದೆ. ಶಿಕ್ಷಕರ ವರ್ಗಾವಣಾ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ. ಹಾಗೆಯೇ ಖಾಸಗಿ ಶಾಲಾ ಶಿಕ್ಷಕರಿಗೆ ಸಿಎಂ ಯಡಿಯೂರಪ್ಪ ಘೋಷಿಸಿದ ಪ್ಯಾಕೇಜ್ ಪರಿಹಾರ ಧನವನ್ನು ಫಲಾನುಭವಿಗಳಿಗೆ ಕ್ಲಪ್ತ ಸಮಯದಲ್ಲಿ ವಿತರಿಸಲು ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.