ಬೆಂಗಳೂರು: ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯು ಜುಲೈ 2ರಂದು ಶುಕ್ರವಾರ ಜೆ.ಪಿ.ನಗರದಲ್ಲಿ ನಡೆಯಿತು. ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ ಅವರು, ಕೇಂದ್ರದಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರವು ಜನಪರವಾಗಿ ಕೆಲಸ ನಿರ್ವಹಿಸುತ್ತಿದೆ. ಕೋವಿಡ್ನ ಸಮರ್ಪಕ ನಿರ್ವಹಣೆ ಮೂಲಕ ಅದು ಇನ್ನಷ್ಟು ಜನಪ್ರಿಯತೆ ಗಳಿಸಿದೆ. ಕೋವಿಡ್ನಂಥ ಸಾಂಕ್ರಾಮಿಕದ ಸಂದರ್ಭದಲ್ಲೂ ಭಾರತವು ಅಭಿವೃದ್ಧಿ ವಿಚಾರದಲ್ಲಿ ಹಿಂದುಳಿದಿಲ್ಲ ಎಂದು ವಿವರಿಸಿದರು.
ರಾಜ್ಯ ಸರಕಾರವು ರೈತಪರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಕೋವಿಡ್ ಸಂಕಷ್ಟದಿಂದಿರುವ ಜನತೆಗೆ ನೆರವಾಗಲು ಮುಖ್ಯಮಂತ್ರಿಗಳು ಈಗಾಗಲೇ ಎರಡು ನೆರವು ಪ್ಯಾಕೇಜ್ಗಳನ್ನು ಪ್ರಕಟಿಸಿದ್ದಾರೆ. ಕೋವಿಡ್ನಿಂದ ಮೃತರಾದ ಬಿಪಿಎಲ್ ಕುಟುಂಬದವರಿಗೆ ಒಂದು ಲಕ್ಷ ರೂಪಾಯಿ ನೀಡುವ ವಿಶಿಷ್ಟ ಯೋಜನೆಯನ್ನೂ ಪ್ರಕಟಿಸಿದ್ದಾರೆ ಎಂದು ತಿಳಿಸಿದರು. ನಮ್ಮ ಇಲಾಖೆಯಿಂದ ಲಭಿಸುವ ಎಲ್ಲಾ ಸೌಲಭ್ಯಗಳನ್ನು ಒಬಿಸಿ ಸಮುದಾಯಕ್ಕೆ ನೀಡಲು ಸಿದ್ಧನಿದ್ದೇನೆ ಎಂದೂ ಅವರು ಹೇಳಿದರು.
ಸಂಸದ ಪಿ.ಸಿ. ಮೋಹನ್ ಅವರು ಮಾತನಾಡಿ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡಿದ ಅನುಭವವಿದೆ. ರಾಜ್ಯದಲ್ಲಿ ನಮ್ಮ ಪರವಾಗಿ ಒಬಿಸಿ ಸಮುದಾಯದ ಶೇಕಡಾ 50ಕ್ಕಿಂತ ಹೆಚ್ಚು ಮತಗಳಿವೆ. ಮುಂದಿನ ದಿನಗಳಲ್ಲಿ ಸಂಘಟನೆಯ ಬಲವರ್ಧನೆ ಮಾಡಬೇಕು. ಒಬಿಸಿ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದರು.
ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ. ನರೇಂದ್ರಬಾಬು ಅವರು ಮಾತನಾಡಿ, ರಾಜ್ಯದಾದ್ಯಂತ 5 ಲಕ್ಷಕ್ಕೂ ಹೆಚ್ಚು ಬೀಜದುಂಡೆಗಳನ್ನು (ಸೀಡ್ ಬಾಲ್) ಮಾಡಿ ಕೊಡಲು ನಿರ್ಧರಿಸಲಾಗಿದೆ. ಕೋವಿಡ್ ಸಂದರ್ಭದಲ್ಲಿ ಒಬಿಸಿ ಘಟಕವು ಸೇವಾ ಹೀ ಸಂಘಟನ್ ಕರೆಗೆ ನಿಸ್ವಾರ್ಥ ರೀತಿಯಲ್ಲಿ ಸ್ಪಂದಿಸಿದೆ ಎಂದು ತಿಳಿಸಿದರು. ಸಂಘಟನೆಯನ್ನು ಬಲಪಡಿಸಲು ರಾಜ್ಯದಾದ್ಯಂತ ಪ್ರವಾಸ ಮಾಡುವುದಾಗಿ ಅವರು ಹೇಳಿದರು.
ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬಸವರಾಜು, ಗೋವಿಂದರಾಜು, ಪ್ರಧಾನ ಕಾರ್ಯದರ್ಶಿ ವಿವೇಕ್ ಡಬ್ಬಿ, ಸುರೇಶ್ ಬಾಬು, ರಾಜ್ಯ ಒಬಿಸಿ ಮೋರ್ಚಾ ಖಜಾಂಚಿ ಗೋವಿಂದ ನಾಯ್ಡು ಅವರು ಭಾಗವಹಿಸಿದ್ದರು. ರಾಜ್ಯದ ಒಬಿಸಿ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಮತ್ತು ಆಹ್ವಾನಿತರು ಈ ಸಭೆಯಲ್ಲಿ ವೆಬೆಕ್ಸ್ ಮೂಲಕ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.