ಬೆಂಗಳೂರು : ಗ್ರಾಮ ಪಂಚಾಯಿತಿ ಸದಸ್ಯರ ವೇತನ ಹೆಚ್ಚಳ, ಸಾರಿಗೆ, ಮತ್ತಿತರ ಸವಲತ್ತುಗಳನ್ನು ಒದಗಿಸುವ ಬಗ್ಗೆ , ಇದೇ 14ರಂದು ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರೊಂದಿಗೆ ಚರ್ಚಿಸಲಾಗುವುದು. ಬಳಿಕ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸದನದಲ್ಲಿ ಮಾತನಾಡಿದ ಅವರು, ಸರ್ಕಾರದ ವತಿಯಿಂದಲೇ, ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಸುವ 25 ವಿಧಾನಪರಿಷತ್ ಸದಸ್ಯರ ನಿಯೋಗವನ್ನು, ಕೇರಳ ಹಾಗೂ ಪಶ್ಚಿಮ ಬಂಗಾಳಕ್ಕೆ ಅಧ್ಯಯನಕ್ಕಾಗಿ ಕಳುಹಿಸಲಾಗುವುದು. ಕೆಳಹಂತದಲ್ಲಿ ಕಾರ್ಯನಿರ್ವಹಿಸುವ ಪಂಚಾಯ್ತಿ ಸದಸ್ಯರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ, ಸಾಧ್ಯವಾದ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ವೇತನ ಹೆಚ್ಚಳ ಕುರಿತು ಸರ್ಕಾರ ಕಳುಹಿಸಿದ್ದ ಪ್ರಸ್ತಾವವನ್ನು, ಆರ್ಥಿಕ ಇಲಾಖೆ 2021ರಲ್ಲಿ ತಿರಸ್ಕರಿಸಿತ್ತು. ಆ ಹಿನ್ನೆಲೆಯಲ್ಲಿ, ಇಲಾಖೆಯಿಂದಲೇ ಸದಸ್ಯರಿಗೆ ಬಸ್ ಪಾಸ್, ಟಿಎ,ಡಿಎ, ಸೌಲ ಸೇರಿ ಇತರೆ ಯಾವ ಸೌಲಭ್ಯ ಕಲ್ಪಿಸಬಹುದು ಎಂಬ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು, ಬಳಿಕ ಮುಖ್ಯಮಂತ್ರಿಗಳ ಬಳಿಗೆ ನಿಯೋಗದಲ್ಲಿ ತೆರಳಿ, ವೇತನ ಸೇರಿದಂತೆ ಸಾಧ್ಯವಿರುವ ಎಲ್ಲಾ ಸವಲತ್ತು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಇತರೆ ಹಿಂದುಳಿದ ವರ್ಗಕ್ಕೆ ಅನ್ಯಾಯವಾಗದಂತೆ, ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ, ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಕೆ.ಎಸ್. ಈಶ್ವರಪ್ಪ ಸದನಕ್ಕೆ ತಿಳಿಸಿದರು.
ಸದ್ಯ 12 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲಾ ಪರಿಷತ್ ನ 90 ಸಾವಿರ ಗ್ರಾಮ ಪಂಚಾಯತಿ ಸದಸ್ಯರಿಗೆ ತರಬೇತಿ ಕಾರ್ಯ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.
ಈ ವರ್ಷದ ಕೇಂದ್ರ ಸರ್ಕಾರದ 13 ಕೋಟಿ ಮಾನವ ದಿನಗಳ ಗುರಿಯನ್ನು ನಾವು ದಾಟಿದ್ದು, ಪ್ರಸ್ತುತ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಅಧಿಕಾರಿಗಳಿಂದ ಈಗಾಗಲೇ 16 ಕೋಟಿ ಮಾನವ ದಿನಗಳ ಕಾರ್ಯ ಪೂರ್ಣಗೊಂಡಿದೆ. ಪ್ರಸ್ತುತ ರೈತರಿಗೆ 15 ದಿನಗಳೊಳಗೆ ವೇತನ ಪಾವತಿಯಾಗುತ್ತಿದ್ದು, ಆದನ್ನು ಒಂದು ವಾರದೊಳಗೆ ದೊರಕಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ ಈಶ್ವರಪ್ಪ, ಮನ್ರೇಗಾ ಹಾಗೂ ಜಲ ಜೀವನ್ ಮಿಷನ್ ಯೋಜನಾ ಕಾರ್ಯಗಳು ಉತ್ತಮ ರೀತಿಯಲ್ಲಿ ಪ್ರಗತಿಯಲ್ಲಿವೆ. ರಾಜ್ಯದಲ್ಲಿ ಮನೆಮನೆಗೆ ಗಂಗೆ ಯೋಜನೆ ಅಡಿಯಲ್ಲಿ 97 ಲಕ್ಷ ಮನೆಗಳ ಪೈಕಿ 45 ಲಕ್ಷ 44 ಸಾವಿರ ಗೃಹಗಳಿಗೆ ನಲ್ಲಿ ನೀರು ತಲುಪಿಸಲಾಗಿದೆ ಎಂದು ಸದನಕ್ಕೆ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.