ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಧಿಕೃತ ಫೇಸ್ಬುಕ್ ಪೇಜ್ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ರವರ ಬಗ್ಗೆ ಅವಹೇಳನಕಾರಿಯಾಗಿ ಏಕವಚನದಲ್ಲಿ ಸಂಬೋಧಿಸಿ ಬರೆದಿದ್ದಾರೆ. ಇತರ ನಾಯಕರನ್ನೂ ಅವಹೇಳನ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಇದರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಾಸಕ ರವಿಸುಬ್ರಹ್ಮಣ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರ ನೇತೃತ್ವದ ನಿಯೋಗವು ಇಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ಸಲ್ಲಿಸಿದರು.
ರಾಜಕೀಯ ಭಿನ್ನಾಭಿಪ್ರಾಯ ಸಹಜ. ಆದರೆ, ದ್ವೇಷದಿಂದ ಒಬ್ಬ ವ್ಯಕ್ತಿಯ ತೇಜೋವಧೆ ಮಾಡುವ ಕಾಂಗ್ರೆಸ್ ಪಕ್ಷದ ಪ್ರಯತ್ನ ಖಂಡನೀಯ. ಬಹುತೇಕ ಸಂದರ್ಭದಲ್ಲಿ ಅವರ ಜಾತಿಯನ್ನು ಮುಂದಿಟ್ಟು, ಮತ್ತೊಂದು ಜಾತಿಯನ್ನು ಎತ್ತಿಕಟ್ಟಿ ಪದೇ ಪದೇ ಟೀಕಿಸಲಾಗುತ್ತಿದೆ ಎಂದು ದೂರಿನಲ್ಲಿ ವಿವರಿಸಿದೆ.
ಕಾಂಗ್ರೆಸ್ ಪಕ್ಷದ ಈ ರೋಗಗ್ರಸ್ತ ಮನಸ್ಥಿತಿಯು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಾರಣವಾಗುತ್ತಿದೆ. ಸುಳ್ಳು ಸುದ್ದಿ ಹರಡುವುದರ ವಿರುದ್ಧ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ ಎಂದು ಸ್ವತಃ ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾರ್ಟಿಯು ಮಾಡಿರುವ ಸಾಮಾಜಿಕ ಜಾಲತಾಣದ ಸುಳ್ಳು ಸಂಗತಿಗಳ ವಿವರವನ್ನು ತಮ್ಮ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ “ಬರ ಪರಿಹಾರದಲ್ಲೂ ಮೋದಿ ಮೋಸ, ನೆರೆ ಪರಿಹಾರದಲ್ಲೂ ಮೋದಿ ಮೋಸ, ಜಿಎಸ್ಟಿ ಹಂಚಿಕೆಯಲ್ಲೂ ಮೋದಿ ಮೋಸ, ಆಕ್ಸಿಜನ್ ಹಂಚಿಕೆಯಲ್ಲೂ ಮೋದಿ ಮೋಸ, ಯೋಜನೆಗಳ ಅನುದಾನದಲ್ಲಿ ಮೋದಿ ಮೋಸ” ಎಂದು ಜನರನ್ನು ತಪ್ಪು ಮಾಹಿತಿ ಕೊಡುವ ಮೂಲಕ ಸುಳ್ಳು ಸುದ್ದಿ ಹರಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಲಾಗಿದೆ. ಕಾಂಗ್ರೆಸ್ ಪಾರ್ಟಿಯು ಮಾಡಿರುವ ಆರೋಪಕ್ಕೆ ದಾಖಲೆ ಒದಗಿಸಿ ಸಮರ್ಥಿಸಿಕೊಳ್ಳಬೇಕು. ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆದೇಶದಂತೆ ಇವರ ಮೇಲೆ ಕಾನೂನಾತ್ಮಕ ಕ್ರಮ ಜರುಗಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಸಚಿವ ಸತೀಶ್ ಜಾರಕಿಹೊಳಿಯವರು ಭಾಗ್ಯಜ್ಯೋತಿ ನೋಂದಣಿ ಮಾಡಿಸಿಕೊಳ್ಳುವ ಪೋರ್ಟಲನ್ನು ಕೇಂದ್ರ ಸರಕಾರವು ಹ್ಯಾಕ್ ಮಾಡಿರುವ ಕಾರಣ ಅದು ಕ್ರಾಶ್ ಆಗುತ್ತಿದೆ ಎಂದು ಅಪ್ಪಟ ಸುಳ್ಳು ಆರೋಪ ಮಾಡಿದ್ದಾರೆ. ಈ ಆರೋಪವು ಕೇಂದ್ರ ಸರಕಾರದ ತೇಜೋವಧೆ ಮಾಡುವ ದುರುದ್ದೇಶದಿಂದ ಕೂಡಿದೆ. ಸಚಿವರು ಮಾಡಿದ ಆರೋಪಕ್ಕೆ ಸಾಕ್ಷ್ಯ ನೀಡದಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
‘ದಿ ಗೈ ಫ್ರಮ್ ಕುಡ್ಲ ಹ್ಯಾಂಡಲ್’ನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ. ಕೂಡಲೇ ಈ ವ್ಯಕ್ತಿಯನ್ನು ಬಂಧಿಸಿ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಲಾಯಿತು. ಹೊಸ ಸರಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳೂ ಕಳೆದಿಲ್ಲ. ಅಷ್ಟರೊಳಗೆ ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ ತುರ್ತು ಪರಿಸ್ಥಿತಿಯ ವಾತಾವರಣವನ್ನು ಮತ್ತೆ ವಾಪಸ್ ತರುವ ನಿಟ್ಟಿನಲ್ಲಿ ನಿರತರಾಗಿದ್ದಾರೆ. ತಮ್ಮ ರಾಜಕೀಯ ವಿರೋಧಿಗಳ ಮೇಲೆ ಫ್ಯಾಕ್ಟ್ ಚೆಕ್ ನೆಪದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವನ್ನು ನಿರ್ಲಜ್ಜತೆಯಿಂದ ಮಾಡಲು ಮುಂದಾಗಿದೆ ಎಂದು ವಿವರಿಸಲಾಗಿದೆ.
ಕಾನೂನು ಕಾಂಗ್ರೆಸ್ ಮತ್ತು ಬಿಜೆಪಿಗೆ ಸಮನಾದುದು. ಆದ್ದರಿಂದ ತಪ್ಪು ಮಾಡಿರುವ ಕಾಂಗ್ರೆಸ್ ವಿರುದ್ಧ ನಾವು ನೀಡಿದ ದೂರಿನ ಆಧಾರದ ಮೇಲೆ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಯಿತು. ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ, ಮುಖಂಡ ಉಮೇಶ್ ಶೆಟ್ಟಿ ಮತ್ತಿತರರು ನಿಯೋಗದಲ್ಲಿ ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.