ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರಕಾರವು ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಷನ್ಗೆ ಇಳಿದಿದೆಯೇ? ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಪ್ರಶ್ನಿಸಿದರು.
ಪದ್ಮನಾಭನಗರದ ಶಾಸಕರ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರು ಕಾಂಗ್ರೆಸ್ ಅಧಿಕಾರ ಪಡೆದರೆ ಎಟಿಎಂ ಸರಕಾರದ ಮುನ್ಸೂಚನೆ ಕೊಟ್ಟಿದ್ದರು. ಅವರ ಮಾತು ನೂರಕ್ಕೆ ನೂರು ಸತ್ಯವಾಗಿದೆ ಎಂದು ಟೀಕಿಸಿದರು.
ಹಿಂದೆ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಆಗಿದ್ದಾಗ ಪೇಸಿಎಂ ಎಂದು ಅಪಪ್ರಚಾರ ಮಾಡಿದ್ದರು. ಈಗ ಪೇ ಕಾಂಗ್ರೆಸ್? ಪೇ ಸಿಎಂ, ಪೇ ಡಿಸಿಎಂ ಆಗಿದೆಯೇ? ಎಂದು ಕೇಳಿದರು. ನೀವು ಕಳಪೆ ಬಗ್ಗೆ ಮಾತನಾಡುತ್ತೀರಿ. ಶಿವಕುಮಾರ್ ಈ ಕುರಿತು ಮಾತನಾಡಿದ್ದಾರೆ. ಕಳಪೆ ಆದರೆ ಸರಕಾರದ ಕಾನೂನು ಕಟ್ಟಳೆಗಳಿವೆ. ಮಾನದಂಡವೂ ಇದೆ. ಕಾರ್ಪೊರೇಷನ್ನಲ್ಲಿ ಸ್ಕ್ವಾಡ್ ಇದೆ ಎಂದರು.
ನಮ್ಮ ಮೇಲೆ 40 ಶೇಕಡಾ ಕುರಿತಂತೆ ನಿರಾಧಾರ ಆರೋಪ ಮಾಡಿದ್ದೀರಿ. ನಿಮ್ಮ ಮೇಲೆ ಶೇ 15ರ ಆರೋಪ ಮಾಡಿದ್ದಾರೆ. ಇದಕ್ಕೆ ನಿಮ್ಮ ಉತ್ತರ ಏನು? ಎಂದು ಕೇಳಿದರು. ಗುತ್ತಿಗೆದಾರರು ಅಜ್ಜಯ್ಯ ದೇವಸ್ಥಾನಕ್ಕೆ ಹೋಗಿ ಆಣೆ ಮಾಡುವಂತೆ ಕೇಳಿದ್ದಾರೆ. ನೀವು ಕಮಿಷನ್ ಕೇಳದೆ ಇದ್ದರೆ ಸವಾಲು ಒಪ್ಪಬೇಕಿತ್ತಲ್ಲವೇ? ಎಂದು ಆರ್.ಅಶೋಕ್ ಅವರು ಪ್ರಶ್ನಿಸಿದರು.
ಫಂಡ್ ಕಲೆಕ್ಷನ್ ಎಂಬುದು ಲೋಕಸಭಾ ಚುನಾವಣೆಗೆ ಗುದ್ದಲಿ ಪೂಜೆಯೇ? ಎಂದು ಕೇಳಿದ ಅವರು, ಗುತ್ತಿಗೆದಾರರ ಸಮಸ್ಯೆ ವಿಚಾರ ಪ್ರಸ್ತಾಪಿಸಿದರು. ಕೆಂಪಣ್ಣನವರೇ ಎಲ್ಲಿದ್ದೀರಪ್ಪ ಎಂದು ಕೇಳಿದರು.
ಬಿಬಿಎಂಪಿಯ 2019ರಿಂದ 2023ರ ಕಾಮಗಾರಿಗಳನ್ನು ಮಾತ್ರ ತನಿಖೆ ಮಾಡ್ತ ಇದ್ದೀರಿ. ನೀವು ಪ್ರಾಮಾಣಿಕರಿದ್ದರೆ 2013ರಿಂದ ತನಿಖೆ ಮಾಡಬಹುದಲ್ಲವೇ? ಗುತ್ತಿಗೆದಾರರೆಲ್ಲರೂ ಕಳ್ಳರಾದರೆ, 50 ವರ್ಷ ರಾಜ್ಯವಾಳಿದ ಕಾಂಗ್ರೆಸ್ಸಿನ ಬಳುವಳಿ ಇವರೇ? ಎಂದು ಪ್ರಶ್ನೆಗಳನ್ನು ಮುಂದಿಟ್ಟರು.
ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿದರೆ ನಿಮ್ಮ ಬ್ರ್ಯಾಂಡ್ ಬೆಂಗಳೂರಿನ ಕಥೆ ಏನು? ದಯಾಮರಣ ಕೋರಿ 300 ಜನ ಗುತ್ತಿಗೆದಾರರು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ಸಿನವರೇ ಇದಕ್ಕೆ ನಿಮ್ಮ ಉತ್ತರ ಏನು? ದೆಹಲಿಯಲ್ಲಿ ಸಚಿವರ ಸಭೆ ಮಾಡಿದ್ದು ಲೋಕಸಭಾ ಸೀಟು ಗೆಲ್ಲಿಸಲೇ ಅಥವಾ ಸೂಟ್ಕೇಸ್ ತುಂಬಿಸಲೋ? ಸನ್ಮಾನ್ಯ ಶಿವಕುಮಾರ್ ಅವರೇ ನಿಮ್ಮದು ಬ್ರ್ಯಾಂಡ್ ಬೆಂಗಳೂರೇ ಅಥವಾ ಬ್ಲ್ಯಾಕ್ ಬೆಂಗಳೂರೇ? ಸಿಎಂ ಹಣ ಬಿಡುಗಡೆ ಮಾಡಿದರೆ ಡಿಸಿಎಂ ತಡೆ ಹಿಡೀತಾರೆ. ವೇಣುಗೋಪಾಲರವರು ಹಣ ಬಿಡುಗಡೆಗೆ ಮತ್ತು ಸುರ್ಜೇವಾಲಾರವರು ಹಣ ತಡೆಹಿಡಿಯಲು ಸೂಚಿಸಿದ್ದರೇ? ಎಂದು ಕೇಳಿದರು. ಈ 11 ಪ್ರಶ್ನೆಗಳಿಗೆ ಉತ್ತರವನ್ನು ನಾವು ನಿರೀಕ್ಷೆ ಮಾಡುತ್ತಿದ್ದು, ಜನರೂ ನಿರೀಕ್ಷೆ ಮಾಡುತ್ತಾರೆ ಎಂದು ನುಡಿದರು.
ಈ ಗುತ್ತಿಗೆದಾರರೆಲ್ಲರೂ ಬಿಜೆಪಿಯ ಮೂರು ವರ್ಷಗಳ ಆಡಳಿತದ ವೇಳೆ ಆಕಾಶದಿಂದ ಇಳಿದಿದ್ದಾರಾ? ಒಬ್ಬರು 29 ವರ್ಷದಿಂದ ಗುತ್ತಿಗೆದಾರರಾಗಿದ್ದವರು ಇಲ್ಲಿದ್ದಾರೆ. 29 ವರ್ಷದಿಂದ ಯಾರು ಆಡಳಿತ ಮಾಡಿದ್ದರು? ಕಾಂಗ್ರೆಸ್ ಪಕ್ಷದ ಆಡಳಿತ ಇತ್ತಲ್ಲವೇ? ಇಲ್ಲಿ ಹಲವು ದಶಕಗಳಿಂದ ಇದ್ದ ಅಧಿಕಾರಿಗಳಿದ್ದಾರೆ. ಅವರಿಗೆಲ್ಲ ತರಬೇತಿ ನೀಡಿದವರು ನೀವೇ ತಾನೇ? ನಿಮ್ಮ ಯೂನಿವರ್ಸಿಟಿಯಲ್ಲಿ ಈ ಕಂಟ್ರಾಕ್ಟರ್ಗಳು, ಇಂಜಿನಿಯರ್ಗಳು ಓದಿದ್ದಾರೆ. ಅಲ್ಲೇ ಪದವಿ, ಪಿ.ಎಚ್.ಡಿ. ಪಡೆದವರು. ಎಲ್ಲ ನಿಮ್ಮ ಯೂನಿವರ್ಸಿಟಿಯಲ್ಲೇ ಇರುವಾಗ ಈಗ ಕಳಪೆ ಎಂದರೆ ಹೇಗೆ ಎಂದು ಅಶೋಕ್ ಅವರು ಕೇಳಿದರು.
ಎಲ್ಲ ಅಧಿಕಾರಿಗಳು, ಗುತ್ತಿಗೆದಾರರು ನಿಮ್ಮ ಲೆಕ್ಕದಲ್ಲಿ ಕಳ್ಳರು. ಹೊಸ ಸರಕಾರ ಬಂದ ಮೇಲೆ ನೀವೆಲ್ಲ ಸತ್ಯ ಹರಿಶ್ಚಂದ್ರರಾ? ಇಂಜಿನಿಯರ್, ವೈದ್ಯರು ಸೇರಿ ಎಲ್ಲ ವೃತ್ತಿಯಲ್ಲೂ ಸಣ್ಣ ಪ್ರಮಾಣದ ಕಳ್ಳರಿರುತ್ತಾರೆ. ಶೇ 5ರಿಂದ 10 ಜನ ಇದ್ದಾರು. ಅವರನ್ನು ನೋಡಿ ತನಿಖೆಗೆ ಒಳಪಡಿಸಿ. ಎಲ್ಲ ಕಂಟ್ರಾಕ್ಟರ್ಗಳ ವಿರುದ್ಧ ಕಳ್ಳರೆಂಬ ಪದ ಬಳಕೆ ಎಷ್ಟು ಸರಿ ಎಂದರು. ಇವರೆಲ್ಲ ಕಳ್ಳರಾದರೆ ನೀವೇನು ದರೋಡೆಕೋರರೇ ಎಂದು ಪ್ರಶ್ನಿಸಿದರು.
ಹೊಸ ಸರಕಾರ ಬಂದಾಗ 6 ತಿಂಗಳು ವಿರೋಧ ಪಕ್ಷ, ಜನರು ಮಾತನಾಡುವುದಿಲ್ಲ. ಮಾಧ್ಯಮದವರು ಅವರ ತಂಟೆಗೆ ಹೋಗುವುದಿಲ್ಲ. ಇಲ್ಲಿ ಬಂದು ಎರಡೇ ತಿಂಗಳಿಗೆ ಹಗರಣಗಳೇ (ಸ್ಕ್ಯಾಂಡಲ್) ಹೆಚ್ಚುತ್ತಿದೆ. ದಿನನಿತ್ಯ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಟೀಕಿಸಿದರು. ಹಲವು ಸಚಿವರ ವಿರುದ್ಧ ಕಮಿಷನ್ ಆರೋಪ ಬಂದಿದೆ ಎಂದು ಅಶೋಕ್ ಅವರು ಆಕ್ಷೇಪಿಸಿದರು. ನೀವೇನು ಸತ್ಯಹರಿಶ್ಚಂದ್ರರೇ? 2013ರಿಂದ ತನಿಖೆ ನಡೆಸಿ ಎಂದು ಸವಾಲೆಸೆದರು.
ಭ್ರಷ್ಟಾಚಾರ ಕೇಸಿನಲ್ಲಿ ಜಾಮೀನಿನಲ್ಲಿ ಇರುವವರು ನೀವಲ್ಲವೇ? ನೀವು ಸತ್ಯ ಹರಿಶ್ಚಂದ್ರನಂತೆ ಮಾತನಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ನುಡಿದಂತೆ ಎಂದು ಟೀಕಿಸಿದರು.
ಎರಡು ತಿಂಗಳಿಂದ ನಿವೇಶನದ ಒಂದು ಪ್ಲಾನ್ಗೆ ಕೂಡ ಒಪ್ಪಿಗೆ ಸಿಗುತ್ತಿಲ್ಲ. ನಿವೇಶನದಲ್ಲಿ ನಿರ್ಮಾಣ ಕಾಮಗಾರಿಗೆ ಅನುಮತಿ ನೀಡದೆ ಇರುವುದರ ಗೂಡಾರ್ಥ ಏನು? ಅಧಿಕಾರಿಗಳು ಲೂಟಿ ಹೊಡೆಯುತ್ತಿದ್ದಾರಾ? 26 ಕಂಡಿಷನ್ ಹಾಕಿದ್ದಾರೆ. ನನ್ನ ಪ್ರಕಾರ ಇದಕ್ಕೆ 26 ವರ್ಷ ಬೇಕೇನೋ? ದಾಖಲೆ ಪಡೆದು ಕೊಡಲು ಕನಿಷ್ಠ ನಾಲ್ಕೈದು ವರ್ಷ ಬೇಕಾದೀತು ಎಂದು ತಿಳಿಸಿದರು. ಕಳೆ ಕಿತ್ತ ಮಾಹಿತಿಯನ್ನೂ ಕೋರಿದ್ದಾರೆ ಎಂದು ಟೀಕಿಸಿದರು.
ಪಾಲಿಕೆಗಳಲ್ಲಿ ವರ್ಗಾವಣೆ ಮಾಡಬೇಕಾದರೆ, ನನ್ನ ಗಮನಕ್ಕೆ ತರದೆ ಮಾಡಬಾರದೆಂದು ಪತ್ರ ಬರೆದಿದ್ದಾರೆ. ನಾನು ಕೂಡ 4 ಸಾರಿ ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದೆ. ಯಾವತ್ತೂ ಕೂಡ ಇಂಥ ಒಂದು ಪತ್ರವನ್ನೂ ಬರೆದಿಲ್ಲ. ಬಿಲ್ ಎಲ್ಲವನ್ನೂ ಪಾವತಿಸದೆ ನಿಲ್ಲಿಸಲು ನಾನು ಯಾವತ್ತೂ ಹೇಳಿರಲಿಲ್ಲ ಎಂದು ಅವರು ತಿಳಿಸಿದರು.
ಕೆಲಸ ಕಾರ್ಯ ಸ್ಥಗಿತವಾದರೆ ಬ್ರ್ಯಾಂಡ್ ಬೆಂಗಳೂರು ಅನುಷ್ಠಾನ ಹೇಗೆ ಸಾಧ್ಯ? ಲೋಡ್ಗಟ್ಟಲೆ ತ್ಯಾಜ್ಯ ಎಲ್ಲೆಂದರಲ್ಲಿ ಬಿದ್ದಿದೆ. ಕಸ ತೆಗೆಯುವವರಿಲ್ಲ. ಕಾಮಗಾರಿ ನಡೆಸುವವರಿಲ್ಲ. ಬ್ರ್ಯಾಂಡ್ ಬೆಂಗಳೂರು ಮಾಡಲು ಸಾಧ್ಯವೇ? ಎಂದರು. ಅರ್ಧದಲ್ಲಿ ನಿಂತ ಮೋರಿ, ರಸ್ತೆ ಮತ್ತಿತರ ಕಾಮಗಾರಿ ನಿಲ್ಲಬಾರದು ಎಂದ ಅವರು, ಕಂಟ್ರಾಕ್ಟರ್ಗಳಿಗೆ ನ್ಯಾಯಯುತವಾಗಿ ಬಾಕಿ ಇರುವ ಹಣ ಬಿಡುಗಡೆ ಮಾಡಿ ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.