ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಡಿಎಂಕೆ ಏಜೆಂಟರಂತೆ ವರ್ತಿಸುತ್ತಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟೀಕಿಸಿದರು.
ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರದ ಸಂಪೂರ್ಣ ವೈಫಲ್ಯವನ್ನು ಖಂಡಿಸಿ ವಿಧಾನಸೌಧದ ಮುಂಭಾಗದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿಯಿಂದ ನಡೆದ ಧರಣಿ ಸತ್ಯಾಗ್ರಹದ ಸಂದರ್ಭದಲ್ಲಿ ಮಾತನಾಡಿದ ಅವರು, ಡಿಎಂಕೆ ಜೊತೆ ಹೊಂದಾಣಿಕೆ ರಾಜಕಾರಣದಿಂದ ರಾಜ್ಯದ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದು ತಿಳಿಸಿದರು. ಈ ಸತ್ಯಾಗ್ರಹದಲ್ಲಿ ಜೆಡಿಎಸ್ ಮುಖಂಡರೂ ಭಾಗವಹಿಸಿದ್ದರು.
ರಾಜ್ಯದ ಜನರು ಬೀದಿಗಿಳಿದು ಹೋರಾಡುತ್ತಿದ್ದು, ಬಿಜೆಪಿ- ಜೆಡಿಎಸ್ ಇದಕ್ಕೆ ಎಲ್ಲ ರೀತಿಯ ಬೆಂಬಲ ಕೊಡುತ್ತದೆ ಎಂದು ಪ್ರಕಟಿಸಿದರು. ಈಗಲಾದರೂ ಇದನ್ನು ಸರಿಪಡಿಸಿ ಎಂದು ಆಗ್ರಹಿಸಿದರು. ಇಲ್ಲವಾದರೆ ಕಾನೂನು- ಸುವ್ಯವಸ್ಥೆ ಹದಗೆಡಲಿದೆ. ಅದಕ್ಕೆ ರಾಜ್ಯ ಸರಕಾರವೇ ಹೊಣೆ ಎಂದು ಎಚ್ಚರಿಸಿದರು.
ನಳಿನ್ಕುಮಾರ್ ಕಟೀಲ್ ಮಾತನಾಡಿ, ರಾಜ್ಯದ ಸರಕಾರ ಕೇವಲ ಕಾಂಗ್ರೆಸ್, ವಿಪಕ್ಷ ಮೈತ್ರಿಕೂಟದ ಹಿತ ಕಾಪಾಡುತ್ತಿದೆ. ಜನಹಿತವನ್ನು ಅದು ಮರೆತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಆಕ್ಷೇಪಿಸಿದರು. ಕಾವೇರಿ ನದಿ ಬಗ್ಗೆ ತಮಿಳುನಾಡಿದ ಸಚಿವರ ಹೇಳಿಕೆಯನ್ನು ಖಂಡಿಸಿದ ಅವರು, ರಾಜ್ಯ ಸರಕಾರವು ಡಿಎಂಕೆ, ಸ್ಟಾಲಿನ್ ಅವರ ಜೊತೆ ಮಾತನಾಡಲು ಸಿದ್ಧವಿಲ್ಲ ಎಂದು ಟೀಕಿಸಿದರು.
ಸ್ಟಾಲಿನ್, ಸೋನಿಯಾ ಗಾಂಧಿ ಜೊತೆ ಮಾತನಾಡಲು ಸಿದ್ರಾಮಣ್ಣ, ಡಿ.ಕೆ.ಶಿವಕುಮಾರರಿಗೆ ಧೈರ್ಯವಿಲ್ಲ. ಅವರ ಭಯದಿಂದ ನೀರು ಬಿಡುತ್ತಿದ್ದಾರೆ ಎಂದು ದೂರಿದರು. ಇದನ್ನು ಖಂಡಿಸುವುದಾಗಿ ಹೇಳಿದರು.
ನೀರಿನ ಹಕ್ಕಿಗಾಗಿ, ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಎಲ್ಲ ಜನಪ್ರತಿನಿಧಿಗಳು ಈ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದೇವೆ. ನೀರು ಉಳಿಸುವ ವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ನಾಡಿಗೆ ದ್ರೋಹ ಬಗೆಯುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಜೆಡಿಎಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್ ಮೈತ್ರಿ ಸರಕಾರ ಇದ್ದಾಗ ಉತ್ತಮ ಆಡಳಿತ ನೀಡಿದ್ದನ್ನು ನೆನಪಿಸಿಕೊಂಡರು.
ನಮ್ಮ ನಾಡಿನ ರೈತರ ಕುರಿತು ಈ ಸರಕಾರ ನಿರ್ಲಕ್ಷ್ಯ ತೋರಿದೆ. ಸರಕಾರ ಕಾವೇರಿ ವಿಚಾರದಲ್ಲಿ ನಿರಂತರವಾಗಿ ಎಡವಿದೆ. ಇದು ಖಂಡನೀಯ ಎಂದು ತಿಳಿಸಿದರು. ಹಿಂದಿನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರಕಾರದ ನಮ್ಮ ತೀರ್ಮಾನದಿಂದ ಕರ್ನಾಟಕಕ್ಕೆ ಹೆಚ್ಚು ನೀರು ಲಭಿಸಿದೆ ಎಂದು ತಿಳಿಸಿದರು.
ನೀರಿನ ಲಭ್ಯತೆಗೆ ಅನುಗುಣವಾಗಿ ಕಾವೇರಿ ನೀರು ಬಿಡುವ ಕುರಿತು ನಿರ್ಧಾರ ಆಗಬೇಕು. ಪ್ರಾಧಿಕಾರದ ಮುಂದೆ ವಾಸ್ತವಾಂಶಗಳನ್ನು ಇಟ್ಟು ಎರಡೂ ರಾಜ್ಯಗಳಿಗೆ ಅನ್ಯಾಯ ಆಗದಂತೆ ಪರಿಹಾರ ಲಭಿಸಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು. ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂಬುದು ಕಾಂಗ್ರೆಸ್ ಸಣ್ಣತನವನ್ನು ತೋರಿಸುತ್ತದೆ ಎಂದು ಟೀಕಿಸಿದರು. ಜವಾಬ್ದಾರಿಯಲ್ಲಿ ಸರಕಾರ ವಿಫಲವಾಗಿದೆ ಎಂದು ನುಡಿದರು. ಇದು ರೈತರ ಬದುಕಿನ ಪ್ರಶ್ನೆ ಎಂದು ತಿಳಿಸಿದರು.
ಡಿ.ವಿ.ಸದಾನಂದಗೌಡ ಮಾತನಾಡಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಮಾತನಾಡಿ, ಸರ್ವಪಕ್ಷ ಸಭೆಯ ಸಲಹೆಗಳನ್ನು ರಾಜ್ಯ ಸರಕಾರ ಪಾಲಿಸದೆ ಕಡೆಗಣಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನಮ್ಮ ಕಾನೂನು ತಂಡಕ್ಕೆ ಸರಿಯಾದ ಮಾಹಿತಿ ಕೊಡುತ್ತಿಲ್ಲವೇ? ಅಥವಾ ಕಾನೂನು ಹೋರಾಟ ತಂಡವು ಸರಿಯಾಗಿ ಪ್ರತಿಪಾದನೆ ಮಾಡುತ್ತಿಲ್ಲವೇ? ಇಲ್ಲವಾದರೆ ಇಂಥ ಕೆಟ್ಟ ತೀರ್ಪು ಬರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರಕಾರವು ಇನ್ನಾದರೂ ಎಚ್ಚತ್ತುಕೊಳ್ಳಲಿ. ಜನರ ಜೀವನದಲ್ಲಿ ಚೆಲ್ಲಾಟ ಆಡದಿರಿ. ಜನಜೀವನದಲ್ಲಿ ರಾಜಕಾರಣವನ್ನು ಬೆರೆಸದಿರಿ ಎಂದು ಅವರು ಎಚ್ಚರಿಕೆ ನೀಡಿದರು. ಬೆಂಗಳೂರಿನಂಥ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಆದರೆ, ಅದರಿಂದ ರಾಜ್ಯ ಮಾತ್ರವಲ್ಲದೆ ದೇಶಕ್ಕೇ ತೊಂದರೆ ಆಗಲಿದೆ. ಹಿನ್ನಡೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.