
ನವದೆಹಲಿ: ಸುಪ್ರೀಂಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ಫಾತೀಮಾ ಬೀವಿ ಇಂದು ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ಫಾತಿಮಾ ಬೀವಿ ಅವರು ಸುಪ್ರೀಂಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶರಾಗಿದ್ದರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಸದಸ್ಯೆಯೂ ಆಗಿದ್ದ ಫಾತಿಮಾ ಬೀವಿ, ಅವರು 1997-2001ರವರೆಗೆ ತಮಿಳುನಾಡಿನ ರಾಜ್ಯಪಾಲರಾಗಿದ್ದರು.
ಅಲ್ಲದೇ ಇವರು ದೇಶದ ಉನ್ನತ ನ್ಯಾಯಾಂಗಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ಮಹಿಳೆಯೂ ಆಗಿದ್ದರು. 1927 ರಲ್ಲಿ ಕೇರಳದಲ್ಲಿ ಜನಿಸಿದ್ದ ಫಾತೀಮಾ ಬೀವಿಗೆ ಅವರ ತಂದೆ ಕಾನೂನು ವಿದ್ಯಾಭ್ಯಾಸ ಮಾಡಲು ಪ್ರೋತ್ಸಾಹ ನೀಡಿದ್ದರು. 1950 ರಲ್ಲಿ, ಬಾರ್ ಕೌನ್ಸಿಲ್ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ಇವರು, ಬಾರ್ ಕೌನ್ಸಿಲ್ ಚಿನ್ನದ ಪದಕವನ್ನು ಪಡೆದ ಮೊದಲ ಮಹಿಳೆ ಎನಿಸಿಕೊಂಡಿದ್ದರು. ಕೇರಳದಲ್ಲಿ ವಕೀಲರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದ ಫಾತೀಮಾ ಬೀವಿ, 1974 ರಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದರು. 1980 ರಲ್ಲಿ ಅವರು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಸೇವೆ ಸಲ್ಲಿಸಿ 1983 ರಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.
1989ರಲ್ಲಿ ಸುಪ್ರೀಂಕೋರ್ಟ್ಗೆ ಮೊದಲ ಮಹಿಳಾ ಜಡ್ಜ್ ಆಗಿ ನೇಮಕವಾದರು. ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ, ಅವರು ಉನ್ನತ ನ್ಯಾಯಾಂಗದಲ್ಲಿನ ಮೊದಲ ಮುಸ್ಲಿಂ ಮಹಿಳೆ ಮತ್ತು ಏಷ್ಯಾದ ದೇಶದಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾದ ಮೊದಲ ಮಹಿಳೆ ಎನಿಸಿಕೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


