ಬೆಂಗಳೂರು: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮುಂದೆ ಬರುವ ವಿಧಾನಪರಿಷತ್ ಚುನಾವಣಾ ಅಭ್ಯರ್ಥಿಗಳ ವಿಚಾರ ಹಾಗೂ ರಾಜ್ಯಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ವಿಷಯಗಳ ಚರ್ಚೆ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು ರಾಜ್ಯಾಧ್ಯಕ್ಷನಾಗಿ ಎಲ್ಲರನ್ನು ಜೊತೆ ಸೇರಿಸಿಕೊಂಡು ಪಕ್ಷವನ್ನು ಮುನ್ನಡೆಸುತ್ತಿರುವ ಕುರಿತು ನಡ್ಡಾ ಅವರು ಸಂತಸ ಸೂಚಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಂದು ಹೊಸ ದಾಖಲೆ ಬರೆಯಲಿದೆ. ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ನಾನು ಭರವಸೆ ನೀಡಿದ್ದೇನೆ ಎಂದು ಪ್ರಶ್ನೆಗೆ ಉತ್ತರಿಸಿದರು.
ರಾಧಾಮೋಹನ್ದಾಸ್ ಅವರು ನಮ್ಮ ರಾಜ್ಯದ ಉಸ್ತುವಾರಿಗಳು. ನಿನ್ನೆ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದೇನೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವತಯಾರಿ ಕುರಿತು ಚರ್ಚೆ ಮಾಡಿದ್ದೇನೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಎಲ್ಲ ವಿಚಾರಗಳ ಕುರಿತು ರಾಷ್ಟ್ರೀಯ ಅಧ್ಯಕ್ಷರ ಸಮ್ಮುಖದಲ್ಲಿ ಚರ್ಚೆ ಆಗಿದೆ. ಅಭ್ಯರ್ಥಿಗಳ ಕುರಿತು ಅಂತಿಮವಾಗಿ ವರಿಷ್ಠರು ನಿರ್ಣಯ ಮಾಡಲಿದ್ದಾರೆ ಎಂದು ಹೇಳಿದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರನ್ನು ಭೇಟಿ ಮಾಡುವ ವೇಳೆ ಅನಿರೀಕ್ಷಿತವಾಗಿ ನಮ್ಮ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರು ಸಿಕ್ಕಿದ್ದರು. ಅವರ ಜೊತೆ ಕುಳಿತು ಚರ್ಚಿಸಿದ್ದೇವೆ. ಅದಕ್ಕೆ ಬಹಳ ವಿಶೇಷತೆ ಅಥವಾ ಬೇರೆ ಅರ್ಥ ಕೊಡುವ ಅಗತ್ಯವಿಲ್ಲ ಎಂದು ಈ ಕುರಿತ ಪ್ರಶ್ನೆಗೆ ನಗುತ್ತಲೇ ಉತ್ತರ ನೀಡಿದರು.
ಸಂಸದರಾದ ಸುಮಲತಾ ಅವರ ಪ್ರಧಾನಿಯವರ ಭೇಟಿ ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ಮಂಡ್ಯ ಕ್ಷೇತ್ರದ ವಿಚಾರವಾಗಿ ಯಾವುದೇ ಚರ್ಚೆ ಆಗಿಲ್ಲ. ನಾಳೆ ರಾತ್ರಿ ಮಾನ್ಯ ಗೃಹ ಸಚಿವ ಅಮಿತ್ ಶಾ ಜೀ ಅವರು ಮೈಸೂರಿಗೆ ಬರಲಿದ್ದಾರೆ. ನಾಡಿದ್ದು ಮೈಸೂರಿನಲ್ಲಿ ನಮ್ಮ ಕೋರ್ ಕಮಿಟಿ ಸಭೆ ನಿಶ್ಚಯವಾಗಿದೆ. ಆ ಸಭೆಯಲ್ಲಿ ಎಲ್ಲವೂ ಚರ್ಚೆ ಆಗಲಿದೆ ಎಂದು ತಿಳಿಸಿದರು.
ರಿಸ್ಕ್ ತೆಗೆದುಕೊಂಡು ಬಿಜೆಪಿಗೆ ಬಂದಿರುವುದಾಗಿ ಡಾ. ಸುಧಾಕರ್ ಅವರ ಹೇಳಿಕೆ ಕುರಿತು ಕೇಳಿದಾಗ, ಸುಧಾಕರ್ ಅವರ ಕ್ಷೇತ್ರದಲ್ಲಿ ಬಿಜೆಪಿ ಅಸ್ತಿತ್ವವೇ ಇರದ ಕ್ಷೇತ್ರ. ಅಲ್ಲಿ ರಾಜೀನಾಮೆ ಕೊಟ್ಟು ಬಿಜೆಪಿ ಬೆಂಬಲಿಸುವುದು ಎಂದರೆ ಅದು ಹುಡುಗಾಟಿಕೆಯ ಮಾತಲ್ಲ; ಅದನ್ನು ಯಶಸ್ವಿಯಾಗಿ ಮಾಡಿದ್ದಾರೆ. ಚುನಾವಣೆಯಲ್ಲಿ ಆಗ ಗೆದ್ದಿದ್ದರು. ಆದರೆ, ಮೊನ್ನೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಹಿನ್ನಡೆ ಆಗಿದೆ; ಸೋತಿದ್ದಾರೆ. ಅವರು ಅಪೇಕ್ಷೆ ಪಡುವುದು ತಪ್ಪಲ್ಲ. ಬಿಜೆಪಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಕಾರ್ಯಕರ್ತರ ಅಭಿಪ್ರಾಯ ಪಡೆದುಕೊಂಡು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು. ಸುಧಾಕರ್ ಅವರಿಗೆ ಕೊಡಬೇಕು ಅಥವಾ ಕೊಡಬಾರದು ಎಂದು ನಾನು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಲೋಕಸಭಾ ಚುನಾವಣಾ ನಂತರ ಬಹುಶಃ ಆ ಪರಿಸ್ಥಿತಿ ಬರಬಹುದು. ಸಿದ್ದರಾಮಯ್ಯನವರು ರಾಜಕೀಯ ಬಿಡುತ್ತಾರೆ ಎನ್ನುತ್ತಿಲ್ಲ; ರಾಜ್ಯದ ಕಾಂಗ್ರೆಸ್ ಸರಕಾರವು ಅಭಿವೃದ್ಧಿಯನ್ನೇ ಮಾಡಿಲ್ಲ. ತನ್ನ ಭರವಸೆಗಳನ್ನೂ ಈಡೇರಿಸಿಲ್ಲ. ರಾಜ್ಯದ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರಕಾರವು ತನ್ನ ಲೋಪದೋಷ, ವೈಫಲ್ಯಗಳನ್ನು ಮುಚ್ಚಿ ಹಾಕಲು ಕೇಂದ್ರ, ನರೇಂದ್ರ ಮೋದಿಜೀ, ಹಣಕಾಸು ಸಚಿವರ ಮೇಲೆ ಆರೋಪ ಮಾಡುತ್ತಿದೆ. ಅದು ಆ ಸ್ಥಾನಕ್ಕೂ ಗೌರವ ತರುವುದಿಲ್ಲ. ಮತ್ತು ರಾಜ್ಯದ ಮರ್ಯಾದೆ ತೆಗೆಯುವ ಕಾರ್ಯವನ್ನು ದೆಹಲಿಯಲ್ಲಿ ಮೊನ್ನೆ ಮಾಡಿದ್ದಾರೆ ಎಂದು ಟೀಕಿಸಿದರು.
ರಾಜ್ಯದ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿಗಳು ಹತಾಶರಾಗಿದ್ದಾರೆ. ಕರ್ನಾಟಕ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷವನ್ನು ಕೈಬಿಡುತ್ತಿದ್ದಾರೆ; ಕಾಂಗ್ರೆಸ್ ಪಕ್ಷವನ್ನು ದೂರ ಮಾಡುತ್ತಿದ್ದಾರೆ ಎಂಬ ಭಾವನೆ ಅವರಿಗೆ ಬಂದಿದೆ. ರಾಜ್ಯದ ಜನ ಇವತ್ತು ಕಾಂಗ್ರೆಸ್ಸಿಗೆ, ಕಾಂಗ್ರೆಸ್ ಸರಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಅಭಿವೃದ್ಧಿ ಶೂನ್ಯ ರಾಜ್ಯ ಸರಕಾರ ಇದ್ದರೆಷ್ಟು ಬಿಟ್ಟರೆಷ್ಟು ಎಂದು ರಾಜ್ಯದ ಜನರು ಮಾತನಾಡುತ್ತಿದ್ದಾರೆ. ಅವರ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ದೆಹಲಿಗೆ ಬಂದು ಈ ನಾಟಕವನ್ನು ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಪಕ್ಷ ಮಾಡಿವೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ಸಿನ ಭ್ರಮೆಗೆ ತಕ್ಕ ಉತ್ತರವನ್ನು ಜನತೆ ಮುಂದಿನ ಚುನಾವಣೆಯಲ್ಲಿ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.