ಬೆಳ್ತಂಗಡಿ : ಗ್ರಾಮ ಪಂಚಾಯತ್ ನೌಕರರಿಗೆ ನೀಡಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಲು ಮುಂದಾಗಿರುವ ಸರಕಾರದ ಕ್ರಮದ ವಿರುದ್ಧ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತು ನೌಕರರ ಸಂಘದ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷ ದೇವಿಪ್ರಸಾದ್ ಬೊಳ್ಮ ಅವರು, ಗ್ರಾಮ ಪಂಚಾಯತು ನೌಕರರು ಅತೀ ಕಡಿಮೆ ವೇತನಕ್ಕೆ ದುಡಿಯುತ್ತಿದ್ದು ಅವರಿಗೆ ಸಿಗುವ ವೇತನದಲ್ಲಿ ಬದುಕನ್ನು ನಡೆಸುವುದೇ ಅಸಾಧ್ಯವಾಗಿದೆ. ಇಂತಹ ಸಂದರ್ಭದಲ್ಲಿ ಸರಕಾರ ಅವರಿಗೆ ನೀಡಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿ ದಂಡ ವಿಧಿಸಲು ಮುಂದಾಗುತ್ತಿರುವುದು ಸರಿಯಲ್ಲ. ದಂಡ ಕಟ್ಟುವ ಶಕ್ತಿ ನೌಕರರಿಗಿಲ್ಲ. ಆದರಿಂದ ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದ ಅವರು ಇಲ್ಲದಿದ್ದಲ್ಲಿ ಮುಂದಿನ ಹಂತದಲ್ಲಿ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ ಅವರು ಪ್ರತಿಭಟನಾಕಾರರಿಂದ ಮನವಿಯನ್ನು ಸ್ವೀಕರಿಸಿ ಮಾತನಾಡಿ, ನೌಕರರ ಬೇಡಿಕೆಗಳು ಸರಿಯಾದುದೇ ಆಗಿದೆ. ಕಡಿಮೆ ವೇತನಕ್ಕೆ ದುಡಿಯುವ ಇವರ ಪಡಿತರ ಚೀಟಿಗಳನ್ನು ರದ್ದು ಪಡಿಸುವುದನ್ನು ಕೂಡಲೇ ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ದಂಡ ವಿಧಿಸುವ ಮೊದಲು ತನಗೆ ಮಾಹಿತಿ ನೀಡುವಂತೆ ಸೂಚಿಸಿದರು. ಗ್ರಾಮ ಪಂಚಾಯತು ನೌಕರರ ಇತರೇ ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದರು.
ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿ ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ವಿವಿಧ ಸಂಘಟನೆಗಳ ಮುಖಂಡರುಗಳಾದ ಪ್ರಕಾಶ್ ಶೆಟ್ಟಿ ನೊಚ್ಚ, ಗಣೇಶ್ ಪೂಜಾರಿ, ತಾಪಂ ಸದಸ್ಯ ಧರ್ಣಪ್ಪ ಪೂಜಾರಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಸತ್ಯ ಪ್ರಕಾಶ, ಸುಶೀಲಾ ಹೆಗ್ಡೆ, ಬಾಲಕೃಷ್ಣ ಗೌಡ, ಜಯಾನಂದ, ಸತ್ಯ ಪ್ರಕಾಶ್, ಪತ್ರಕರ್ತ ದೇವಿ ಪ್ರಸಾದ್, ಮೋಹನ, ಕಾಸೀಂ ಪದ್ಮುಂಜ ಮಾತನಾಡಿ ಬೆಂಬಲ ಘೋಷಿಸಿದರು. ಸತೀಶ್ ನಾರಾವಿ ಸ್ವಾಗತಿಸಿದರು. ಸತೀಶ್ ಹೊಸಂಗಡಿ ಕಾರ್ಯಕ್ರಮ ನಿರೂಪಿಸಿದರು. ಪ್ರತಿಭಟನೆಯ ಬಳಿಕ ತಹಶೀಲ್ದಾರರ ಮೂಲಕ ಆಹಾರ ಇಲಾಖೆಯ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.