ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದು ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ ನಡೆಸಿದೆ.
ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಲೆಯೇರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿರುವ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಶಾಸಕರಾದ ಭೈರತಿ ಬಸವರಾಜ್ ಎಂಎಲ್ ಸಿ ರವಿ ಕುಮಾರ್ ಸಿ.ಟಿ ರವಿ ಭಾಗಿಯಾಗಿದ್ದಾರೆ. ಪ್ರತಿಭಟನೆ ವೇಳೆ ನಾಯಕರು ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ವಿಜಯೇಂದ್ರ , ಸರ್ಕಾರದ ಜನವಿರೋಧಿ ನಿಲುವಿನ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಕ್ಷೇತ್ರಗಳ ಮೇಲೆ ನೇರ ಪರಿಣಾಮ ಬೀರಲಿದೆ. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದೊಡ್ಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬಿದ್ದಿವೆ ಎಂದಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ಸಲುವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಬಕ್ರೀದ್ ಮುನ್ನಾದಿನ ಪೆಟ್ರೋಲ್ ಡಿಸೇಲ್ ಬೆಲೆ ಏರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಬಕ್ರಾ ಮಾಡಿದೆ. ಸಿದ್ದರಾಮಯ್ಯ ಅವರು ಊಸರವಳ್ಳಿಯನ್ನೂ ಮೀರಿಸುವ ನಾಟಕ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬೆಲೆ ಏರಿಸಿ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಸಿ.ಟಿ ರವಿ ಆರೋಪಿಸಿದ್ದಾರೆ.
ರಾಜ್ಯ ಸರ್ಕಾರ ಪೆಟ್ರೋಲ್ ದರ 3 ರೂ. ಡೀಸೆಲ್ ದರ 3.50 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಇದು ರಾಜ್ಯವ್ಯಾಪಿ ಜರ ಆಕ್ರೋಶಕ್ಕೆ ಕಾರಣವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.