ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ಪರಮ ಪಾವನೆ ನೇತ್ರಾವತಿಯನ್ನು ಬರಡಾಗಿಸುವ ಎತ್ತಿನಹೊಳೆ ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಅನುಷ್ಠಾನಿಸಿದ್ದು, ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಕಷ್ಟ ಎದುರಾಗಬಹುದಾಗಿದೆ.
ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಅಗತ್ಯವಿದ್ದು, ಎತ್ತಿನಹೊಳೆ ಯೋಜನೆಯ ಮೂಲಕ ಅದಕ್ಕೆ ಪರಿಹಾರ ದೊರಕಬಹುದೆಂಬುದು ಕಾಲ್ಪನಿಕ. ಎತ್ತಿನಹೊಳೆ ಯೋಜನೆ ಅನುಷ್ಠಾನಗೊಂಡರೆ ಸುಮಾರು 24.01 ಟಿಎಂ.ಸಿ ನೀರನ್ನು ತಿರುಗಿಸಬಹುದೆಂಬ ಸರ್ಕಾರದ ಯೋಜನಾ ವರದಿ ಸತ್ಯಕ್ಕೆ ದೂರವಾಗಿದೆ ಎಂಬುದು ಅನೇಕ ತಜ್ಞರ ಹಾಗೂ ಸಂಬಂಧ ಪಟ್ಟ ಸಂಸ್ಥೆಗಳ ಅಭಿಪ್ರಾಯ.
ವಾಸ್ತವವನ್ನು ಪರಿಶೀಲಿಸಿದಾಗ ಯೋಜನೆಯಿಂದ ಉದ್ದೇಶಿತ ಜಿಲ್ಲೆಗಳಿಗೆ ಉಪಯೋಗವಿಲ್ಲದೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಮಾರಕ ಎಂಬುದು ಸ್ಪಷ್ಟವಾಗುತ್ತದೆ. ಇಷ್ಟು ಮಾತ್ರವಲ್ಲದೆ ಸರ್ಕಾರ ಜಿಲ್ಲೆಯ ಜನರನ್ನು ಹಾಗೂ ಜನಪ್ರತಿನಿಧಿಗಳನ್ನು ಕತ್ತಲಲ್ಲಿಟ್ಟು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಸುತ್ತಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.
ಸರ್ಕಾರದ ಈ ಅವೈಜ್ಞಾನಿಕ ಹಾಗೂ ಮಾರಕ ಯೋಜನೆಯ ವಿರುದ್ಧ ಬಿಜೆಪಿ ದ.ಕ.ಜಿಲ್ಲಾ ಸಮಿತಿ, ಸಂಸದರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇದೇ ಬರುವ ಅಕ್ಟೋಬರ್ 10 ರಿಂದ 13 ರ ವರೆಗೆ 4 ದಿನಗಳ ಬೃಹತ್ ಕಾಲ್ನಡಿಗೆ ಜಾಥಾವನ್ನು ಮಂಗಳೂರಿನಿಂದ ಎತ್ತಿನಹೊಳೆಗೆ “ನೇತ್ರಾವತಿ ರಕ್ಷಿಸಿ, ದಕ್ಷಿಣ ಕನ್ನಡ ಉಳಿಸಿ”- ‘ನಮ್ಮ ನಡಿಗೆ ಎತ್ತಿನಹೊಳೆಗೆ’ ಎಂಬ ಘೋಷಣೆಯೊಂದಿಗೆ ಹಮ್ಮಿಕೊಂಡಿದ್ದು, ಜಿಲ್ಲೆಯ ಯುವಜನಾಂಗ ಹಾಗೂ ವಿದ್ಯಾರ್ಥಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದರ ಜೊತೆಗೆ ಜನವಿರೋಧಿ ಸರ್ಕಾರವನ್ನು ಎಚ್ಚರಿಸಬೇಕಾಗಿ ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾ ವಿನಂತಿಸುತ್ತದೆ ಎಂದು ವಿಕಾಸ್ ಪುತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.