ಬೆಂಗಳೂರು : ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಆದರೆ, 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶವನ್ನು ಸರ್ಕಾರ ಸಂರಕ್ಷಿಸಿದ್ದು, ಹೆಚ್ಚುವರಿ ಬಫರ್ ಪ್ರದೇಶ (4554 ಎಕರೆ)ವನ್ನು ಶೂನ್ಯ ಸೂಕ್ಷ ಪ್ರದೇಶವಾಗಿ ಮಾಡುವ ಷರತ್ತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರಬಹುದು ಎಂಬ ನಿರ್ಧಾರಕ್ಕೆ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ (ಬಾಧ್ಯಸ್ಥರ) ಸಭೆ ನಿರ್ಣಯ ತೆಗೆದುಕೊಂಡಿದೆ.
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಎಲ್ಲರ ಅಭಿಪ್ರಾಯ ಪಡೆದು ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಬಳಿಕ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು ಕೇಂದ್ರ ಸರ್ಕಾರಕ್ಕೆ ನಮ್ಮ ನಿಲುವು ತಿಳಿಸಲೂ ಈ ಸಭೆಯಲ್ಲಿ ನಿರ್ಧರಿಸಲಾಗಿದೆ.
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗುವುದು ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆ.2ರಂದು 6ನೇ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಒಳಗೆ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ ನಡೆದ 11 ಜಿಲ್ಲೆಗಳ ಜನಪ್ರತಿನಿಧಿಗಳ (ಬಾಧ್ಯಸ್ಥರ) ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಈ ವಿವರ ನೀಡಿದರು.
ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಮತ್ತು ಕುಂದಾಪುರ ಶಾಸಕರಾದ ಕಿರಣ್ ಕೊಡ್ಗಿ ಅವರು ಕ್ಷೇತ್ರದ ಜನರಿಗೆ ಆಗುವಂತಹ ಸಾಧಕ -ಬಾಧಕಗಳ ಬಗ್ಗೆ ಧ್ವನಿ ಎತ್ತಿ ಸಚಿವರ ಗಮನಕ್ಕೆ ತಂದರು.
ಸಭೆಯಲ್ಲಿ ಸಚಿವರುಗಳಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೋಳಿ, ಮಧು ಬಂಗಾರಪ್ಪ, ಮಾಂಕಾಳ ವೈದ್ಯ, ವಿಧಾನಪರಿಷತ್ ಉಪ ಸಭಾಪತಿ ಪ್ರಾಣೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಶಾಸಕರುಗಳಾದ ಆರಗ ಜ್ಞಾನೇಂದ್ರ, ಹರೀಶ್ ಪೂಂಜಾ, ನಯನ ಮೋಟಮ್ಮ, ರಾಜೇಗೌಡ, ಸಂಸದರಾದ ಶ್ರೇಯಸ್ ಪಟೇಲ್ ಮತ್ತಿತರರು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.