ವಯನಾಡು: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ಕೇರಳದ ವಯನಾಡಿನ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದು, ಈ ಮೂಲಕ ತಮ್ಮ ಚೊಚ್ಚಲ ಚುನಾವಣಾ ಸ್ಪರ್ಧೆಗೆ ಹೆಜ್ಜೆ ಮುಂದಿಟ್ಟಿದ್ದಾರೆ.
ಕಲ್ಪೆಟ್ಟಾದಲ್ಲಿ ಮೆಗಾ ರೋಡ್ ಶೋ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರಿಯಾಂಕಾ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಿ ಆರ್ ಮೇಘಶ್ರೀ ಅವರ ಮುಂದೆ ಪತ್ರ ಸಲ್ಲಿಸಿದರು. ತಾಯಿ ಸೋನಿಯಾ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಸಹೋದರ ರಾಹುಲ್ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವೇಳೆ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಕಲ್ಪೆಟ್ಟಾದಲ್ಲಿ ನಡೆದ ರೋಡ್ ಶೋನಲ್ಲಿ ವಯನಾಡ್ ಮತ್ತು ಸಮೀಪದ ಕೋಝಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಂದ ಪಕ್ಷದ ಸಾವಿರಾರು ಕಾರ್ಯಕರ್ತರು ಭಾಗಿಯಾಗಿ ಶಕ್ತಿ ಪ್ರದರ್ಶನ ಮಾಡಿದರು. ತೆರೆದ ವಾಹನದಲ್ಲಿ ರಾಹುಲ್, ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ ಸುಧಾಕರನ್ ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ಪಾಣಕ್ಕಾಡ್ ಸಾದಿಕ್ ಅಲಿ ಶಿಹಾಬ್ ತಂಗಲ್ ಅವರೊಂದಿಗೆ ಪ್ರಿಯಾಂಕಾ ರೋಡ್ ಶೋ ಮಾಡಿದರು.
ಇದುವರೆಗೆ ತನ್ನ ಕುಟುಂಬ ಮತ್ತು ಪಕ್ಷದ ಪರವಾಗಿ ಪ್ರಚಾರ ಕಾರ್ಯದಲ್ಲಿ ಮಾತ್ರ ತೊಡಗಿಸಿಕೊಂಡಿದ್ದ ಪ್ರಿಯಾಂಕ ಮೊದಲ ಬಾರಿಗೆ ಸ್ವತಃ ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ.
ವಯನಾಡು ಕ್ಷೇತ್ರದಿಂದ ಸಂಸದನಾಗಿ ಗೆದ್ದುಬಂದಿದ್ದ ರಾಹುಲ್ ಗಾಂಧೀ ಬಳಿಕ ರಾಯ್ ಬರೇಲಿ ಕ್ಷೇತ್ರವನ್ನು ತಮ್ಮಲ್ಲಿ ಉಳಿಸಿ ವಯನಾಡಿಗೆ ರಾಜೀನಾಮೆ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.