ನವದೆಹಲಿ: ಜಾಟ್ ಸಮುದಾಯ ಮೀಸಲಾತಿ ಕುರಿತು ಹರಿಯಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರ ಇದರ ಪರಿಶೀಲನೆಗಾಗಿ ಸಮಿತಿ ರಚಿಸಿದೆ. ಆದರೆ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ಬಳಿಕವೇ ಇದರ ಪರೀಶೀಲನೆ ಮತ್ತು ವಿಶ್ಲೇಷಣೆ ನಡೆಸಲು ಸಾಧ್ಯ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಸಂಸತ್ತಿನಲ್ಲಿ ನಡೆದ ಸರ್ವಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ಬಳಿಕ ಜಾಟ್ ಮೀಸಲಾತಿ ಮತ್ತು ರೋಹಿತ್ ವೆಮುಲಾ ಕುರಿತು ಚರ್ಚಿಸಲು ಕೇಂದ್ರ ಸಿದ್ಧವಿದೆ. ಹರಿಯಾಣದಲ್ಲಿ ಜಾಟ್ ಸಮುದಾಯ ನಡೆಸಿದ ಹಿಂಸಾಚಾರ ಖಂಡನೀಯ ಮತ್ತು ದುರದೃಷ್ಟಕರ. ವಿನಾಕಾರಣ ಹಿಂಸಾಚಾರ ನಡೆಸಲಾಗಿದೆ ಎಂದು ನಾಯ್ಡು ಹೇಳಿದ್ದಾರೆ.
ಜೆಎನ್ಯು, ಹೈದರಾಬಾದ್ ಅಥವಾ ಇನ್ನಾವುದೇ ವಿಚಾಗಳನ್ನು ಚರ್ಚಿಸಲು ಸರ್ಕಾರಕ್ಕೆ ಮುಜುಗರವಿಲ್ಲ. ಈ ವಿಚಾರಗಳನ್ನು ಮುಕ್ತವಾಗಿ ಚರ್ಚಿಸಬೇಕು. ಇಂತಹ ವಿಚಾರಗಳನ್ನು ಚರ್ಚಿಸಲು ಪ್ರತಿಯೊಬ್ಬರಿಗೂ ಅವಕಾಶವಿದೆ ಎಂದು ಅವರು ಈ ವೇಳೆ ಹೇಳಿದ್ದಾರೆ.
ಸಭೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ, ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ಕಾಂಗ್ರೆಸ್ನ ಹಿರಿಯ ನಾಯಕ ಘುಲಾಂ ನಬಿ ಆಝಾದ್, ಎಂಪಿಸಿಎ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಉಪಸ್ಥಿತರಿದ್ದರು.
ಸರ್ಕಾರಿ ಉದ್ಯೋಗ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಜಾಟ್ ಸಮುದಾಯದವರ ಮೀಸಲಾತಿ ಮತ್ತಿತರ ಬೇಡಿಕೆಗಳನ್ನು ಪರಿಗಣಿಸಿ ಪರಿಶೀಲನೆ ನಡೆಸಲು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ನೇತೃತ್ವದ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.