ಬೆಳ್ತಂಗಡಿ: ರಾಜ್ಯಾದ್ಯಂತ ಯೋಗವನ್ನು ಜನಪ್ರಿಯಗೊಳಿಸಲು ಯೋಗ ಸಂಗಮ ಕಾರ್ಯಕ್ರಮವನ್ನು ವಿಸ್ತರಿಸಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಮಂಗಳವಾರ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಉಜಿರೆ ಎಸ್ಡಿಎಂ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಜೀವ ಗಾಂಧಿ ವಿವಿ ಸಂಯೋಜನೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಒಂದು ಸಾವಿರ ಶಿಬಿರಾರ್ಥಿಗಳಿಂದ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಬಳಿಕ ನಡೆದ ಸಭೆಯಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಳೆದ 30 ವರ್ಷಗಳಿಂದ ಶಾಂತಿವನ ಟ್ರಸ್ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಮೂಲಕ ಶಿಕ್ಷಕರ ನೇಮಿಸಿ ಯೋಗ ಸಂಗಮದ ಮೂಲಕ ಅನುಷ್ಠಾನಗೊಳಿಸುತ್ತಿದೆ. ಶಾಲೆಗಳಲ್ಲಿ ಮೂರು ಸಾವಿರ ಯೋಗ ಶಿಕ್ಷಕರನ್ನು ನೇಮಿಸಲಾಗಿದೆ. ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಯೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದ್ದು ಇದನ್ನು ರಾಜ್ಯದ್ಯಂತ ಇನ್ನಷ್ಟು ಜಿಲ್ಲಾ ಕೇಂದ್ರಗಳಿಗೆ ವಿಸ್ತರಿಸಿ ಯೋಗದ ಪ್ರಚಾರಕ್ಕೆ ಇನ್ನೂ ಹೆಚ್ಚಿನ ಕಾರ್ಯಕ್ರಮ ರೂಪಿಸಲಾಗುವುದು. ರೋಗ ಮುಕ್ತ ಜೀವನ ನಡೆಸಲು ದಿನನಿತ್ಯ ಯೋಗಾಭ್ಯಾಸ ಮಾಡಿ ವೈದ್ಯರಿಂದ ದೂರವಿರಿ ಎಂಬ ಧ್ಯೇಯವಾಕ್ಯದಡಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಆಯುಷ್ಯ ಮತ್ತು ಆರೋಗ್ಯ ವೃದ್ಧಿಯೊಂದಿಗೆ ಕ್ರಿಯಾಶೀಲ ವ್ಯಕ್ತಿತ್ವ ಬೆಳೆಸಿಕೊಳ್ಳಬಹುದು. ವಯಸ್ಸಾದರು ಕೂಡಾ ಯೋಗಭ್ಯಾಸದಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ರೋಗ ನಿರೋಧಕ ಶಕ್ತಿ ವರ್ಧನೆಯೊಂದಿಗೆ ವೈದ್ಯರಿಂದ ದೂರ ಇರಬಹುದು. ನಮ್ಮ ಬದುಕಿನಲ್ಲಿ ಯೋಗವನ್ನು ದೀಕ್ಷೆಯಾಗಿ ಸ್ವೀಕರಿಸಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.
ರಾಜೀವ್ಗಾಂಧಿ ಆರೋಗ್ಯ ವಿ.ವಿ.ಯ ಕುಲಪತಿ ಡಾ| ಕೆ. ಎಸ್. ರವೀಂದ್ರನಾಥ್ ಮಾತನಾಡಿ, ಪ್ರಕೃತಿ ಚಿಕಿತ್ಸಾ ಕಾಲೇಜುಗಳಿಗೆ ಹೆಚ್ಚಿನ ಬೇಡಿಕೆಯಿದೆ. ರಾಜ್ಯದಲ್ಲಿ ಈಗಾಗಲೇ ಮೂರು ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜುಗಳಿದ್ದು ಉಜಿರೆ ಕಾಲೇಜು ಶ್ರೇಷ್ಠ ಗುಣಮಟ್ಟ ಹಾಗೂ ಮಾನ್ಯತೆ ಹೊಂದಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಇನ್ನೊಂದು ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ಪ್ರಾರಂಭಿಸಲಾಗುವುದು ಎಂದು ಅವರು ಪ್ರಕಟಿಸಿದರು.
ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದೊಂದಿಗೆ ಶಾಂತಿ, ನೆಮ್ಮದಿ ಸಿಗುತ್ತದೆ. ಯೋಗದ ಬಗ್ಯೆ ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆ ನಡೆಸಬೇಕು. ಯೋಗಾಭ್ಯಾಸ ಒಂದು ದಿನಕ್ಕೆ ಸೀಮಿತವಾಗದೆ ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವೃತ್ತಿಪರ ಯೋಗ ಪಟುಗಳಿಂದ ತರಬೇತಿ ಪಡೆದು ನಿಯಮಿತವಾಗಿ ಯೋಗಾಭ್ಯಾಸ ಮಾಡಬೇಕು ಎಂದರು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು, ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ. ನೇತೃತ್ವದಲ್ಲಿ ಎಲ್ಲಾ ಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮೂಲಕ ಯೋಗಾಭ್ಯಾಸವನ್ನು ಕಡ್ಡಾಯಗೊಳಿಸಲಾಗಿದೆ. ದೇಶದ ಎಲ್ಲಾ ವಿ.ವಿ.ಗಳಲ್ಲಿ ಇದನ್ನು ಅನುಸರಿಸಬೇಕು ಎಂದು ಅವರು ಕೋರಿದರು.
ಎನ್ಎಸ್ಎಸ್ ಪ್ರಾದೇಶಿಕ ನಿರ್ದೇಶಕ ಅರುಣ್ ಕುಮಾರ್ ಯನ್. ಪೂಜಾರ್ ಅವರು, ಯುವಜನತೆ ದೇಶದ ಪ್ರಗತಿಗಾಗಿ ಅಮೂಲ್ಯ ಸೇವೆ ಮತ್ತು ತ್ಯಾಗ ಮಾಡಬೇಕು. ಯೋಗಾಭ್ಯಾಸ ಅನುಭವ ಶಾಸ್ತ್ರವಾಗಿದ್ದು ಮುಂದಿನ ವರ್ಷ ಕಾಲೇಜುಗಳಲ್ಲಿ ಯೋಗವನ್ನು ಐಚ್ಛಿಕ ವಿಷಯವನ್ನಾಗಿ ಬೋಧಿಸಲಾಗುವುದು ಎಂದರು.
ಮಹಿಳಾ ಅಭಿವೃದ್ಧಿ ನಿಗಮದ ಆಡಳಿತ ನಿರ್ದೇಶಕ ಕೆ. ಎನ್. ವಿಜಯಪ್ರಕಾಶ್, ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಸಂಯೋಜಕ ಡಾ| ವಸಂತ ಶೆಟ್ಟಿ, ಉಜಿರೆ ಜನಾರ್ದನ ಸ್ವಾಮಿ ದೇವಳದ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ, ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಜೀವಂಧರ್ ಕುಮಾರ್, ಕಾಲೇಜಿನ ಯೋಗ ಡೀನ್ ಡಾ| ಶಿವಪ್ರಸಾದ್ ಶೆಟ್ಟಿ, ಪ್ರಕೃತಿ ಚಿಕಿತ್ಸಾ ವಿಭಾಗದ ಡೀನ್ ಡಾ| ಸುಜಾತಾ ಉಪಸ್ಥಿತರಿದ್ದರು. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಡಾ| ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಯೋಗ ಮತ್ತು ನೈತಿಕ ಶಿಕ್ಷಣ ನಿರ್ದೇಶಕ ಡಾ| ಐ. ಶಶಿಕಾಂತ್ ಜೈನ್ ವಂದಿಸಿದರು. ಡಾ| ಮೇಘ ಕಾರ್ಯಕ್ರಮ ನಿರ್ವಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.