ಸುಳ್ಯ: ಸುಳ್ಯ ತಾಲೂಕು ಬ್ರಾಹ್ಮಣ ಸಂಘದ ಆಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಂಡ ವಿಪ್ರ ಸಭಾಭವನದ ಉದ್ಘಾಟನಾ ಸಮಾರಂಭ ಮೇ 4ರಂದು ಬೆಳಗ್ಗೆ ಗಂಟೆ 10ಕ್ಕೆ ನಡೆಯಲಿದೆ ಎಂದು ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ವೆಂಕಟ್ರಮಣ ಭಟ್ ನೆಟ್ಟಾರು ತಿಳಿಸಿದ್ದಾರೆ.
ಅವರು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿ ಜೂನಿಯರ್ ಕಾಲೇಜು ರಸ್ತೆಯ ಸುವಿಪ್ರ ಕಂಪೌಂಡ್ನಲ್ಲಿರುವ ಸುಳ್ಯ ತಾಲೂಕು ಬ್ರಾಹ್ಮಣ ಸಂಘದಲ್ಲಿ ಅನೇಕ ವರ್ಷಗಳಿಂದ ವಿದ್ಯಾರ್ಥಿ ಭವನ ನಡೆಯುತ್ತಿದ್ದು, ಹಲವಾರು ವಿದ್ಯಾರ್ಥಿಗಳು ವಾಸವಿದ್ದು ವ್ಯಾಸಂಗ ಮಾಡಿದ್ದಾರೆ. ಇದೀಗ ಈ ಕಟ್ಟಡದ ಮೇಲ್ಭಾಗದಲ್ಲಿ ವಿಪ್ರ ಸಭಾಭವನ ನಿರ್ಮಾಣಗೊಂಡಿದೆ. ಸುಮಾರು 300 ಮಂದಿಗೆ ಕುಳಿತುಕೊಳ್ಳುವ ವ್ಯವಸ್ಥೆ ಇದ್ದು, ಸಭೆ, ಇನ್ನಿತರ ಕಾರ್ಯಕ್ರಮ ನಡೆಸಲು ಅನುಕೂಲವಾಗಿದೆ. ಸುಮಾರು ಒಂದು ಎಕ್ರೆ ಆವರಣದೊಳಗೆ ಈ ಸಭಾಭವನವಿದ್ದು, ವಾಹನ ಪಾರ್ಕಿಂಗ್ಗೂ ಅವಕಾಶವಿದೆ.
ಸಭಾಭವನದ ಉದ್ಘಾಟನೆಯನ್ನು ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಪಿ.ಜಯರಾಮ ಭಟ್ ನೆರವೇರಿಸಲಿದ್ದಾರೆ. ತಾಲೂಕು ಬ್ರಾಹ್ಮಣ ಸಂಘದ ಗೌರವಾಧ್ಯಕ್ಷ ಪಾಲೆಪ್ಪಾಡಿ ಗಣಪಯ್ಯ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ದಾನಿಗಳ ಭಾವಚಿತ್ರ ಅನಾವರಣವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಟಿ.ಶ್ಯಾಮ್ ಭಟ್ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿ.ಪಂ.ಅಧ್ಯಕ್ಷೆ ಆಶಾ ತಿಮ್ಮಪ್ಪ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ತಾ.ಪಂ.ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ನ.ಪಂ.ಅಧ್ಯಕ್ಷ ಎನ್.ಎ.ರಾಮಚಂದ್ರ, ಕರ್ಣಾಟಕ ಬ್ಯಾಂಕ್ ಮುಖ್ಯ ಮಹಾ ಪ್ರಬಂಧಕ ಎಂ.ಎಸ್. ಮಹಾಬಲೇಶ್ವರ ಭಟ್, ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ಪುಟಾಣಿಗಳಿಂದ ‘ಕುಬೇರನ ಔತಣ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಬಾಲಕೃಷ್ಣ ಭಟ್ ಕೊಡೆಂಕಿರಿ, ಪ್ರಧಾನ ಕಾರ್ಯದರ್ಶಿ ಕೆ.ಗಣೇಶ ಶರ್ಮ, ಜತೆ ಕಾರ್ಯದರ್ಶಿ ಕೆ.ಕೃಷ್ಣ ನಾವಡ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.