ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ವ್ಯುತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.
ಸಾಂಪ್ರದಾಯಿಕ ಆಚರಣೆಗಳು
ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದ ಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ. ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದ ವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ.
ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ. ಭೂಮಿಯಿಂದ ನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ – ಅಂದರೆ ಮೇಷ ರಾಶಿಯ 0 – 13:20 ಭಾಗ(ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು. ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದು ಏಪ್ರಿಲ್ 14 ಅಥವಾ 15 ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ. ರವಿಚಂದ್ರರ ಗತಿಯನ್ನವಲಂಬಿಸಿ, 11 ರಿಂದ 13 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿ ನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ.
ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.
ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.
ಅಂದಿನ ವಿಶೇಷ ತಿನಿಸು
ಒಬ್ಬಟ್ಟು ಅಥವಾ ಹೋಳಿಗೆ. ತೆಂಗಿನಕಾಯಿ ಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣದಲ್ಲಿ ಮಾಡುವರು. ಇದನ್ನೇ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
ಬೇವು-ಬೆಲ್ಲ
ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಬೇವು – ಬೆಲ್ಲದ ಮಿಶ್ರಣವನ್ನು ತಿನ್ನುವಾಗ ಹೇಳುವ
ಒಂದು ಶ್ಲೋಕ ಹೀಗಿದೆ:
ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ |
ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ ||
ಅದರರ್ಥ ಹೀಗಿದೆ – ನೂರು ವರುಷಗಳ ಆಯುಷ್ಯ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ.
ಯುಗಾದಿ ಹಬ್ಬ ಹೊಸತನಕ್ಕೆ ನಾಂದಿಯಂತೆ. ಈ ಯುಗಾದಿ ಎಲ್ಲರ ಜೀವನದಲ್ಲಿ ಸುಖ ಸಂತೋಷ ನೆಮ್ಮದಿ ಯಸ್ಶಸ್ಸು ಕೀರ್ತಿ ತರಲಿ. ಭಾರತ ಮತ್ತೆ ವಿಶ್ವಮಾತೆ ಜಗದ್ಗುರುವಾಗಲಿ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.