ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಸೋಮವಾರ ವಿವಿಧ ಭದ್ರತಾ ಮಂಡಳಿಗಳ ಉನ್ನತ ಅಧಿಕಾರಿಗಳೊಂದಿಗೆ ಅತ್ಯಂತ ಮಹತ್ವದ ಸಭೆಯನ್ನು ನಡೆಸಿದ್ದು, ಜಮ್ಮು ಕಾಶ್ಮೀರ, ಕೇರಳ, ನಕ್ಸಲ್ ಪೀಡಿತ ರಾಜ್ಯಗಳಲ್ಲಿನ ಭದ್ರತಾ ಪರಿಸ್ಥಿತಿಗಳ ಬಗ್ಗೆ, ಗಡಿಯಾಚೆಗಿನ ಬೆದರಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯ ಬಗ್ಗೆ ಸರ್ಕಾರ ಶೂನ್ಯ ಸಹಿಷ್ಣುತಾ ನೀತಿಯನ್ನು ಮುಂದುವರೆಸುತ್ತದೆ ಎಂಬ ಭರವಸೆಯನ್ನು ನೀಡಿರುವ ಶಾ ಅವರು, ನಕ್ಸಲ್ ಹಿಂಸಾಚಾರ, ಕೇರಳ ಮುಂತಾದ ರಾಜ್ಯಗಳಲ್ಲಿನ ಜಿಹಾದಿ ಸಂಘಟನೆಗಳ ಚಟುವಟಿಕೆಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು, ಗೃಹ ಕಾರ್ಯದರ್ಶಿ ರಾಜೀವ್ ಗೂಬ, ಇಂಟೆಲಿಜೆನ್ಸ್ ಬ್ಯುರೋ ನಿರ್ದೇಶಕ ರಾಜೀವ್ ಜೈನ್, ರಾ ಮುಖ್ಯಸ್ಥ ದಶ್ಮನ್, ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ಏನೇ ಟೀಕೆಗಳು ಬಂದರೂ ಭಯೋತ್ಪಾದನೆಯ ಬಗೆಗಿನ ಶೂನ್ಯ ಸಹಿಷ್ಣುತಾ ನೀತಿಯನ್ನು ಸಡಿಲಗೊಳಿಸುವಂತಿಲ್ಲ ಎಂದು ಗೃಹ ಸಚಿವಾಲಯದ ಅಧಿಕಾರಿಗಳಿಗೆ ಶಾ ಅವರು ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.
ಮುಂಬರುವ ದಿನಗಳಲ್ಲಿ ಶಾ ಅವರು, ಪ್ಯಾರಾಮಿಲಿಟರಿ ಪಡೆಗಳ ಮುಖ್ಯಸ್ಥರು ಮತ್ತು ಪೊಲೀಸ್ ಮುಖ್ಯಸ್ಥರುಗಳೊಂದಿಗೆ ಮಾತುಕತೆಗಳನ್ನು ನಡೆಸಲಿದ್ದಾರೆ. ದೆಹಲಿ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲೂ ಅವರು ಕಾರ್ಯೋನ್ಮುಖಗೊಳ್ಳಲಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.