ನವದೆಹಲಿ: ಎರಡನೇಯ ಅವಧಿಯ ನರೇಂದ್ರ ಮೋದಿ ನೇತೃತ್ವದ ಸರ್ಕಾರದಡಿಯ ಮೊತ್ತ ಮೊದಲ ಬಿಜೆಪಿ ಸಂಸದೀಯ ಸಭೆ ಇಂದು ಜರುಗಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಎಲ್ಲಾ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಇದರಲ್ಲಿ ಭಾಗಿಯಾಗಲಿದ್ದಾರೆ.
ಈ ಸಭೆ ಕಳೆದ ಮಂಗಳವಾರವೇ ನಡೆಯಬೇಕಿತ್ತು, ಆದರೆ ರಾಜಸ್ಥಾನ ಬಿಜೆಪಿ ಮುಖ್ಯಸ್ಥ ಮದನ್ ಲಾಲ್ ಸೈನಿ ಅವರ ಹಠಾತ್ ನಿಧನದ ಕಾರಣ ಸಭೆಯನ್ನು ರದ್ದುಪಡಿಸಲಾಗಿತ್ತು. ಸಾಮಾನ್ಯವಾಗಿ ಸಂಸತ್ತಿನಲ್ಲಿ ಅಧಿವೇಶನ ನಡೆಯುವ ಸಂದರ್ಭದಲ್ಲಿ, ಪ್ರತಿ ಮಂಗಳವಾರ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನು ನಡೆಸುತ್ತದೆ.
ಸಭೆಯಲ್ಲಿ ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿಯವರು ಕೆಲವೊಂದು ನಿರ್ದೇಶನಗಳನ್ನು ನೀಡುವ ನಿರೀಕ್ಷೆಯಿದೆ. ಸಂಸತ್ತಿನಲ್ಲಿ ಹಾಜರಾತಿಯನ್ನು ಖಚಿತಪಡಿಸಿಕೊಳ್ಳುವುದು, ಚರ್ಚೆಗಳಲ್ಲಿ ಮತ್ತು ಸದನದ ಇತರ ವ್ಯವಹಾರಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಇತ್ಯಾದಿಗಳ ಬಗ್ಗೆ ಅವರು ಸದಸ್ಯರಿಗೆ ನಿರ್ದೇಶನ ನೀಡುವ ಸಾಧ್ಯತೆಯಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೊದಲ ತಿಂಗಳು, ರೈತರು, ಸಣ್ಣ ವ್ಯಾಪಾರಿಗಳು ಮತ್ತು ಭದ್ರತಾ ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಮಾಡಿದ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸುವಂತೆ ಅವರು ಸಂಸತ್ ಸದಸ್ಯರಿಗೆ ಸೂಚಿಸಲಿದ್ದಾರೆ.
ಸಭೆಯಲ್ಲಿ ಕೇಂದ್ರ ಬಜೆಟ್ ಬಗ್ಗೆಯೂ ಮಹತ್ವದ ಚರ್ಚೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ (ಜುಲೈ 5) ಬಜೆಟ್ ಮಂಡಿಸಲಿದ್ದಾರೆ. ಅಲ್ಲದೇ, ಮೋದಿ ಸರ್ಕಾರದ ಮಹತ್ವದ ಎರಡು ಮಸೂದೆಗಳಾದ – ಭಾರತೀಯ ವೈದ್ಯಕೀಯ ಮಂಡಳಿ (ತಿದ್ದುಪಡಿ) ಮಸೂದೆ, 2019 ಮತ್ತು ಆಧಾರ್ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಮಸೂದೆ, 2019 ಗಳೂ ಕೂಡ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.