ನವದೆಹಲಿ: ಹಳೆ ದೆಹಲಿಯ ಹೌಜ್ ಖಾಜಿ ಪ್ರದೇಶದಲ್ಲಿ ಉದ್ಭವಿಸಿದ ದೇಗುಲ ಧ್ವಂಸ ಮತ್ತು ಕೋಮು ಸಂಘರ್ಷಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ದೆಹಲಿ ಪೊಲೀಸ್ ಕಮಿಷನರ್ ಅಮೂಲ್ಯ ಪಟ್ನಾಯಕ್ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅವರು ಗೃಹಸಚಿವರಿಂದ ಖಂಡನೆಗೊಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೌಜ್ ಖಾಜಿ ಪ್ರದೇಶದಲ್ಲಿ ದೇಗುಲವೊಂದನ್ನು ದುಷ್ಕರ್ಮಿಗಳ ಗುಂಪು ಧ್ವಂಸಗೊಳಿಸಿದ್ದು, ಇದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಶಾ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ದೆಹಲಿ ಪೊಲೀಸ್ ಮುಖ್ಯಸ್ಥ, ಇದೊಂದು ಸಾಮಾನ್ಯ ವಿವರಣಾ ಸಭೆ ಎಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದೇವೆ, ಮತ್ತಿಬ್ಬರನ್ನು ಗುರುತಿಸಲಾಗಿದ್ದು ಶೀಘ್ರದಲ್ಲೇ ಅವರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದಿದ್ದಾರೆ.
ಇದರ ನಡುವೆ, ರಾಷ್ಟ್ರ ರಾಜಧಾನಿಯಲ್ಲಿನ ಕೋಮು ಉದ್ವಿಗ್ನತೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಮೂಲಕ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಯನ್ನು ನಡೆಸಬೇಕೆಂದು ಕೋರಿ ದೆಹಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೂಡಲಾಗಿದೆ. ದೆಹಲಿ ಹೈಕೋರ್ಟ್ನಲ್ಲಿ ವಕೀಲ ಅಲಖ್ ಅಲೋಕ್ ಅವರು ಈ ಪಿಐಎಲ್ ದಾಖಲಿಸಿದ್ದಾರೆ.
ಕೇಂದ್ರ ಸಚಿವ ಹರ್ಷವರ್ಧನ್ ಮಂಗಳವಾರ ದೆಹಲಿಯ ಹೌಜ್ ಖಾಜಿ ಪ್ರದೇಶಕ್ಕೆ ಭೇಟಿ ನೀಡಿದ್ದು, ಜನರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದಂತೆ ಈ ಪ್ರದೇಶದಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.