ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ದಾಖಲಾಗಿದ್ದ ಅಪರಾಧ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಪ್ರಕರಣ ರದ್ದುಗೊಳಿಸುವಂತೆ ಕೋರಿ ಪ್ರಭಾಕರ ಭಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಪ್ರಭಾಕರ ಭಟ್ ಪರ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ಐಪಿಸಿ 153 (ಎ) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಈ ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸುವ ಮುನ್ನ ರಾಜ್ಯ ಇಲ್ಲವೇ ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ.ಆದರೆ, ದೂರುದಾರರು ಈ ನಿಯಮ ಪಾಲಿಸಿಲ್ಲ ಎಂದರು.
ಜೊತೆಗೆ, ಆರೋಪಗಳಿಗೆ ಸಂಬಂಧಿಸಿದಂತೆ ಪೊಲೀಸರು ಸೂಕ್ತ ಸಾಕ್ಷ್ಯಾಧಾರ ನೀಡಿಲ್ಲ. ಇದು ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಅರ್ಜಿದಾರರ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಹುನ್ನಾರವಾಗಿದೆ. ಆದ್ದರಿಂದ ಪ್ರಕರಣ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು. ಈ ವಾದವನ್ನು ನ್ಯಾಯಪೀಠ ಪುರಸ್ಕರಿಸಿತು.
ಬಂಟ್ವಾಳ ತಾಲ್ಲೂಕಿನ ಕೈರಂಗಳ ಗ್ರಾಮದ ಪುಣ್ಯಕೋಟಿ ನಗರದಲ್ಲಿ 2018ರ ಏಪ್ರಿಲ್ 6 ರಂದು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗದ ಅನುಮತಿ ಪಡೆಯದೆ ಸಭೆ ನಡೆಸಲಾಗಿದೆ ಎಂದು ಆರೋಪಿಸಿದ್ದಲ್ಲದೆ, ಅವರ ಹೇಳಿಕೆ ಪ್ರಚೋದನಕಾರಿಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈಗ ಎಲ್ಲ ಆರೋಪಗಳೂ ಮುಕ್ತವಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.