ಮುಂಬಯಿ: ಪ್ರವಾಹದಿಂದ ತತ್ತರಿಸಿರುವ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಇದುವರೆ ಕನಿಷ್ಠ 179 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕೃತ ಅಂಕಿ ಅಂಶಗಳು ಮಂಗಳವಾರ ಮಾಹಿತಿ ನೀಡಿವೆ. ಕೇರಳದಲ್ಲಿ ಅತೀ ಹೆಚ್ಚು ಅಂದರೆ 88 ಮಂದಿ ಮೃತಪಟ್ಟಿದ್ದಾರೆ. ನಂತರದ ಸ್ಥಾನದಲ್ಲಿ ಕರ್ನಾಟಕ ಇದ್ದು, ಇಲ್ಲಿ 48 ಮಂದಿ ಅಸುನೀಗಿದ್ದಾರೆ ಮತ್ತು ಮಹಾರಾಷ್ಟ್ರದಲ್ಲಿ 43 ಮಂದಿ ಸಾವನ್ನಪ್ಪಿದ್ದಾರೆ.
ಭೀಕರ ಮಳೆ ಮತ್ತು ಪ್ರವಾಹ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಅನೇಕ ಸಾವು ನೋವುಗಳಿಗೆ ಕಾರಣವಾಗಿದೆ. ಈ ಮೂರು ರಾಜ್ಯಗಳ ಹಲವು ಜಿಲ್ಲೆಗಳಲ್ಲಿ ಭೂಕುಸಿತಗಳೂ ಸಂಭವಿಸಿವೆ. ಕೇರಳದ 14 ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ, ಮಲಪ್ಪುರಂ ಅತಿ ಹೆಚ್ಚು ಸಾವುನೋವುಗಳನ್ನು ಕಂಡಿದೆ. ಇಲ್ಲಿ ಸತ್ತವರ ಸಂಖ್ಯೆ 29 ಆಗಿದೆ. ಪ್ರಸ್ತುತ ಈ ರಾಜ್ಯದಲ್ಲಿ 1,332 ಪರಿಹಾರ ಶಿಬಿರಗಳು ಕಾರ್ಯನಿರ್ವಹಿಸುತ್ತಿವೆ. ಮುಂದಿನ ಐದು ದಿನಗಳವರೆಗೆ ರಾಜ್ಯದಲ್ಲಿ ಮಳೆ ಅಥವಾ ಗುಡುಗು ಸಹಿತ ಮೋಡ ಕವಿದ ವಾತಾವರಣ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಇತರ ಸಚಿವರು ಮತ್ತು ಉನ್ನತ ಅಧಿಕಾರಿಗಳು ಮಂಗಳವಾರ ಪ್ರವಾಹ ಪೀಡಿತ ಜಿಲ್ಲೆಗಳಾದ ವಯನಾಡ್ ಮತ್ತು ಮಲಪ್ಪುರಂಗೆ ಭೇಟಿ ನೀಡಿ ಸ್ಥಿತಿಗತಿಗಳನ್ನು ವೀಕ್ಷಣೆ ಮಾಡಿದ್ದಾರೆ.
ಕರ್ನಾಟಕದಲ್ಲಿ 48 ಜನರು ಸಾವನ್ನಪ್ಪಿದ್ದರೆ, 12 ಮಂದಿ ನಾಪತ್ತೆಯಾಗಿದ್ದಾರೆ. 6.73 ಲಕ್ಷಕ್ಕೂ ಹೆಚ್ಚು ಜನರನ್ನು ಮತ್ತು 50,000 ಪ್ರಾಣಿಗಳನ್ನು ರಕ್ಷಿಸಲಾಗಿದೆ. ರಾಜ್ಯದಾದ್ಯಂತ 1224 ಪರಿಹಾರ ಶಿಬಿರಗಳಲ್ಲಿ ಒಟ್ಟು 3,93,956 ಮಂದಿ ಆಶ್ರಯ ಪಡೆದಿದ್ದಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ, 17 ಜಿಲ್ಲೆಗಳಲ್ಲಿ 2738 ಗ್ರಾಮಗಳು ಮತ್ತು 86 ತಾಲ್ಲೂಕುಗಳು ನೆರೆ ಬಾಧಿತವಾಗಿವೆ. ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸಿದೆ.
ಪ್ರವಾಹ ಮತ್ತು ಭೂಕುಸಿತದಿಂದಾಗಿ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಮತ್ತು ಪ್ರಮುಖ ಜಿಲ್ಲಾ ರಸ್ತೆಗಳು ಸೇರಿದಂತೆ 136 ಪ್ರಮುಖ ರಸ್ತೆಗಳಲ್ಲಿ ಸಂಪರ್ಕವು ಅಸ್ತವ್ಯಸ್ತಗೊಂಡಿದೆ. “ಕೊಲ್ಹಾಪುರದ ಶಿರೋಲಿ ಪ್ರದೇಶದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ -4 ಅನ್ನು ನೀರು ತುಂಬಿದ ಕಾರಣ ಸಂಚಾರಕ್ಕಾಗಿ ಮುಚ್ಚಲಾಗಿದೆ” ಎಂದು ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.
ಅನೇಕ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ನೀರಿನ ಏರಿಕೆ ಕಡಿಮೆಯಾಗಲು ಪ್ರಾರಂಭವಾಗಿದೆ, ಉತ್ತರ ಕರ್ನಾಟಕದ ಒಳಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. ಅಗ್ನಿಶಾಮಕ ಮತ್ತು ಎಸ್ಡಿಆರ್ಎಫ್, ಎನ್ಡಿಆರ್ಎಫ್ ಮತ್ತು ಭಾರತೀಯ ಸೇನೆಯ ಜಂಟಿ ರಕ್ಷಣಾ ತಂಡಗಳು ಸೋಮವಾರದವರೆಗೆ 6.73 ಲಕ್ಷ ಜನರನ್ನು ಸ್ಥಳಾಂತರಿಸಿವೆ.
ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರವಾಹದ ಪರಿಹಾರ ಕಾರ್ಯಗಳಿಗಾಗಿ 10,000 ಕೋಟಿ ರೂ. ನೆರವು ನೀಡುವಂತೆ ಕೇಂದ್ರಕ್ಕೆ ಮನವಿಯನ್ನು ಮಾಡಿಕೊಂಡಿದ್ದಾರೆ. “ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಗೃಹ ಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಕೂಡ ಪರಿಶೀಲನೆಯನ್ನು ನಡೆಸಿದ್ದಾರೆ. ರಾಜ್ಯದಲ್ಲಿ 50,000 ಕೋಟಿಗೂ ಹೆಚ್ಚು ನಷ್ಟವಾಗಿದೆ. ಆಗಸ್ಟ್ 16 ರಂದು ನಾನು ಈ ಬಗ್ಗೆ ಪ್ರಧಾನ ಮಂತ್ರಿಯನ್ನು ಭೇಟಿ ಮಾಡಲು ದೆಹಲಿಗೆ ಹೋಗುತ್ತಿದ್ದೇನೆ, 10,000 ಕೋಟಿಗಳ ನೆರವನ್ನು ಬಿಡುಗಡೆ ಮಾಡುವಂತೆ ನಾನು ಭಾರತ ಸರ್ಕಾರವನ್ನು ವಿನಂತಿಸುತ್ತೇನೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.