ಬೆಂಗಳೂರು : 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯವಾಗಿ ಸೋಲನ್ನು ಅನುಭವಿಸಿದೆ. 15 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಗೆಲ್ಲಲು ಶಕ್ತವಾಗಿರುವುದು ಕೇವಲ ಎರಡು ಸ್ಥಾನಗಳಲ್ಲಿ ಮಾತ್ರ. ಈ ಹಿನ್ನಲೆಯಲ್ಲಿ ಸೋಲಿನ ನೈತಿಕ ಹೊಣೆಯನ್ನು ಹೊತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದ್ದಾರೆ. ಇನ್ನೊಂದೆಡೆ ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.
ಈಗಾಗಲೇ ದಿನೇಶ್ ಗುಂಡೂರಾವ್ ಮತ್ತು ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ಹೈಕಮಾಂಡ್ಗೆ ಸಲ್ಲಿಸಿದ್ದಾರೆ. ಆದರೆ ಹೈಕಮಾಂಡ್ ಇನ್ನು ಇವರಿಬ್ಬರ ರಾಜೀನಾಮೆಯನ್ನು ಅಂಗೀಕರಿಸಿಲ್ಲ ಎಂದು ಮೂಲಗಳು ತಿಳಿಸಿವೆ.
15 ಕ್ಷೇತ್ರಗಳ ಉಪಚುನಾವಣೆಯ ಬಗ್ಗೆ ಬಿಜೆಪಿ 12 ಸ್ಥಾನಗಳನ್ನು ಗೆದ್ದು ಕೊಂಡಿದೆ. ಆದರೆ ಕನಿಷ್ಠ 9 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಹೊಂದಿದ್ದ ಕಾಂಗ್ರೆಸ್ಗೆ ತೀವ್ರ ಮುಖಭಂಗ ಉಂಟಾಗಿದೆ. ಹುಣಸೂರು ಮತ್ತು ಶಿವಾಜಿನಗರ ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಜಯಗಳಿಸಿದೆ. ಇದು ಆ ಪಕ್ಷಕ್ಕೆ ತೀವ್ರತರವಾದ ಮುಖಭಂಗವನ್ನು ಉಂಟುಮಾಡಿದೆ.
ಫಲಿತಾಂಶದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಪಕ್ಷದ ಹಿತದೃಷ್ಟಿಯಿಂದ ತಾವು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.