ಬೆಂಗಳೂರು: ಕೊರೋನವೈರಸ್ ಭೀತಿ ಕರ್ನಾಟಕಕ್ಕೂ ಕಾಲಿಟ್ಟಿದೆ. ಬೆಂಗಳೂರಿನಲ್ಲಿ ತಂಗಿದ್ದ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರಿಗೆ ಕೊರೋನವೈರಸ್ ಇರುವುದು ದೃಢಪಟ್ಟ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ರಾಜ್ಯಕ್ಕೆ ಆಗಮಿಸಿರುವ ಪ್ರವಾಸಿಗರನ್ನು ಸ್ಕ್ರೀನಿಂಗ್ಗೆ ಒಳಪಡಿಸಲಾಗಿದೆ.
ಬಲ್ಲಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನಲ್ಲಿನ ಹಂಪಿಗೆ ಭೇಟಿ ನೀಡುವ ವಿದೇಶಿ ಪ್ರವಾಸಿಗರನ್ನು ವೈದ್ಯರ ತಂಡ ಪರೀಕ್ಷಿಸುತ್ತಿದೆ. ಹಂಪಿಗೆ ಬರುವ ಮೊದಲು ಅವರು ಭೇಟಿ ನೀಡಿದ ದೇಶಗಳ ಬಗ್ಗೆ ಪ್ರವಾಸಿಗರನ್ನು ಪ್ರಶ್ನಿಸಲಾಗುತ್ತಿದೆ ಎಂದು ತಂಡದ ಮುಖ್ಯಸ್ಥ ಡಾ. ವಿನೋದ್ ಹೇಳಿದ್ದಾರೆ. ಶೀತ, ಜ್ವರ ಮತ್ತು ಕೆಮ್ಮಿನಂತಹ ಸಮಸ್ಯೆಗಳಿರುವವರನ್ನು ಹೆಚ್ಚು ತಪಾಸಣೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಕೇಂದ್ರದ ನಿರ್ದೇಶನಗಳ ಅನ್ವಯ, ಆಯ್ದ 18 ದೇಶಗಳ ಪ್ರಯಾಣಿಕರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವ ಮಂಗಳೂರು ಬಂದರಿನಲ್ಲಿ ಪರೀಕ್ಷಿಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದ್ದಾರೆ. ಇಲ್ಲಿಯವರೆಗೆ 20,000 ಜನರನ್ನು ಪರೀಕ್ಷಿಸಲಾಗಿದೆ ಮತ್ತು ಕೊರೋನವೈರಸ್ ಇರುವುದು ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತೆಲಂಗಾಣ ಮತ್ತು ಆಂಧ್ರಪ್ರದೇಶದೊಂದಿಗೆ ಗಡಿ ಹಂಚಿಕೊಳ್ಳುವ ಬೀದರ್, ಕಲಬುರ್ಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಎಚ್ಚರಿಕೆಯನ್ನು ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ತಲಾ ಐದು ಹಾಸಿಗೆಗಳ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಫೆಬ್ರವರಿ 24 ರಿಂದ ಬೀದರ್ ವಿಮಾನ ನಿಲ್ದಾಣದಲ್ಲಿ ಸುಮಾರು 500 ಪ್ರಯಾಣಿಕರನ್ನು ಪರೀಕ್ಷಿಸಲಾಗಿದೆ.
ರಾಯಚೂರು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರು ಮಂಗಳವಾರ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು ಮತ್ತು ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ಆಗಮಿಸುವ ಜನರನ್ನು ಪರೀಕ್ಷಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ಬಸ್ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣಗಳಲ್ಲಿ ನಿಯೋಜಿಸಲಾಗುವುದು ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.