ಮಂಡ್ಯ: ಪ್ಲಾಸ್ಟಿಕ್ ಎಂಬ ಮಹಾಮಾರಿಯಿಂದ ಜಿಲ್ಲೆಯನ್ನು ರಕ್ಷಿಸುವ ಸಲುವಾಗಿ ಮಂಡ್ಯ ಜಿಲ್ಲಾಡಳಿತ ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು 25 ಸಾವಿರ ಬಟ್ಟೆ ಚೀಲಗಳನ್ನು ವಿತರಣೆ ಮಾಡುವ ಮೂಲಕ ಇತರರಿಗೂ ಮಾದರಿಯಾಗಿದ್ದಾರೆ.
ಮಂಡ್ಯವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡುವುದಕ್ಕಾಗಿ ಪಣ ತೊಟ್ಟಿರುವ ಅಧಿಕಾರಿಗಳು, ಸಾರ್ವಜನಿಕರಿಗೆ ಬಟ್ಟೆ ಚೀಲಗಳನ್ನು ವಿತರಣೆ ಮಾಡುವ ಮೂಲಕ ಪ್ಲಾಸ್ಟಿಕ್ ಬಳಕೆಯಿಂದಾಗುವ ಅನಾಹುತಗಳ ಕುರಿತು ಅರಿವು ಮೂಡಿಸುವ ಕೆಲಸವನ್ನು ಮಾಡಿದೆ. ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರ ನೇತೃತ್ವದಲ್ಲಿ ಈ ಮಾದರಿ ಕಾರ್ಯಕ್ಕೆ ಚಾಲನೆಯನ್ನು ನೀಡಲಾಗಿದೆ.
ಮಂಡ್ಯದ ಬಿ. ಅರ್. ಅಂಬೇಡ್ಕರ್ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಬಟ್ಟೆ ಚೀಲಗಳನ್ನು ವಿತರಿಸಿ ಮಾತನಾಡಿದ ಜಿಲ್ಲಾಧಿಕಾರಿ, ”ಪರಿಸರದ ಸಮತೋಲನ ಕಾಯ್ದುಕೊಳ್ಳುವಿಕೆ, ಮಾಲಿನ್ಯ ಮುಕ್ತವನ್ನಾಗಿಸುವುದರ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡಿದೆ. ಪ್ಲಾಸ್ಟಿಕ್ ಕಾರಣದಿಂದ ಜೀವರಾಶಿಗಳು ಸೇರಿದಂತೆ ಸಂಪೂರ್ಣ ಪ್ರಕೃತಿಯೇ ವಿಷಮಯವಾಗುತ್ತಿದೆ. ತಿನ್ನುವ ಆಹಾರ, ನೀರು, ಗಾಳಿ ಎಲ್ಲವೂ ಕೆಟ್ಟು ಹೋಗಿದೆ. ಅರೋಗ್ಯದ ಮೇಲೆಯೂ ಇದು ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಇದರ ಬಳಕೆ ನಿಲ್ಲಿಸಿದಾಗ ಮಾತ್ರ ಈ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಹೊಂದುವುದು ಸಾಧ್ಯ” ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಮತ್ತು ಕಾರ್ಯನಿರತ ಬ್ಯಾಂಕ್ಗಳ ಸಹಭಾಗಿತ್ವದಲ್ಲಿ ಈ ಮಾದರಿ ಕಾರ್ಯಕ್ರಮವನ್ನು ನಡೆಸಲಾಗಿದೆ. ಪ್ಲಾಸ್ಟಿಕ್ ಎಂಬ ಪೆಡಂಭೂತದ ಕೈಗೆ ಸಿಲುಕಿ ಇಡೀ ಪ್ರಪಂಚವೇ ನಲುಗಿ ಹೋಗಿರುವಾಗ, ಪ್ರಕೃತಿಯನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ತೆಗೆದುಕೊಂಡ ಈ ಕ್ರಮ ನಿಜಕ್ಕೂ ಪ್ರಶಂಸನಾರ್ಹವೇ ಸರಿ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.