ಬಂಟ್ವಾಳ: ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಸಾಮಾಜಿಕ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ನಟರಾಜ್ ಕರೆ ನೀಡಿದರು.
ಬಿ.ಸಿ.ರೋಡ್ನ ಸ್ತ್ರೀಶಕ್ತಿ ಸಭಾಭವನದಲ್ಲಿ ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ಭಾರತೀಯ ಜೀವ ವಿಮಾ ನಿಗಮದ ಆಮ್ ಆದ್ಮಿ ವಿಮಾ ಯೋಜನೆ ವತಿಯಿಂದ ಸ್ತ್ರೀಶಕ್ತಿ ಗುಂಪಿನ ಸದಸ್ಯರ ಮಕ್ಕಳಿಗೆ ನೀಡಲಾಗುವ ವಿದ್ಯಾರ್ಥಿವೇತನ ವನ್ನು ವಿತರಿಸಿ ಮಾತನಾಡಿದರು.
ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು ನಡೆಸುವ ಜನೋಪಯೋಗಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರ ಜೊತೆಗೆ ತಮ್ಮ ಗುಂಪುಗಳನ್ನು ಕ್ರಿಯಾಶೀಲವಾಗಿ ಮುನ್ನಡೆಸುವಂತೆ ಅವರು ಸಲಹೆ ನೀಡಿದರು. ರಾಜ್ಯಕ್ಕೆ ಹೋಲಿಸಿದರೆ ಜಿಲ್ಲೆಯ ಸ್ತ್ರೀಶಕ್ತಿ ಗುಂಪುಗಳು ಹೆಚ್ಚು ಸಕ್ರಿಯವಾಗಿ ಮುನ್ನಡೆಯುತ್ತಿದ್ದು, ಇದರ ಹಿಂದೆ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಹಾಗೂ ಅಧಿಕಾರಗಳ ಶ್ರಮ ಪ್ರಶಂಸನೀಯ ಎಂದರು.
ಎಲ್ಐಸಿಯ ವಿಭಾಗೀಯ ಪ್ರಬಂಧಕ ಶಂಕರ ಹೆಗಡೆಯವರು ಮಾತನಾಡಿ, ಜನಶ್ರೀ ವಿಮಾ ಯೋಜನೆ ಕಳೆದ ಎರಡು ವರ್ಷಗಳಿಂದೀಚೆಗೆ ಆಮ್ ಆದ್ಮಿ ಎಂಬ ಹೊಸ ಹೆಸರು ಪಡೆದುಕೊಂಡಿದ್ದು, ಫಲಾನುಭವಿಗಳಿಗೆ ಜೀವಭದ್ರತೆ ಒದಗಿಸುತ್ತಿದೆ ಎಂದರು. ಸ್ತ್ರೀಶಕ್ತಿ ಗುಂಪಿನ ಸದಸ್ಯರು ವಿಮಾಯೋಜನೆಯನ್ನು ಹೆಚ್ಚಿನ ಮಹಿಳೆಯರು ಪಡೆದುಕೊಳ್ಳುವಂತೆ ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸುವಂತೆ ಮನವಿ ಮಾಡಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ ವಿಶ್ವಕರ್ಮ ಶುಭಹಾರೈಸಿದರು. ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಶಾರದಾ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಶಿಶುಅಭಿವೃದ್ದಿ ಯೋಜನಾಧಿಕಾರಿ ಮಲ್ಲಿಕಾ ಸ್ವಾಗತಿಸಿದರು, ಮೇಲ್ವಿಚಾರಕಿ ಸಿಂಧು ವಂದಿಸಿದರು. ಮೇಲ್ವಿಚಾರಕಿಯರಾದ ಪುಷ್ಪಲತಾ ಹಾಗೂ ಗಾಯತ್ರಿ ಕಂಬಳಿ ಕಾರ್ಯಕ್ರಮ ನಿರ್ವಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.