ಬೆಂಗಳೂರು: ಕನ್ನಡ ಸಾರಸ್ವತ ಲೋಕದ ಮಿನುಗುತಾರೆ ನಾಡೋಜ ಪಾಟೀಲ ಪುಟ್ಟಪ್ಪನವರು ಸೋಮವಾರ ರಾತ್ರಿ ಇಹಲೋಕವನ್ನು ತ್ಯಜಿಸಿದ್ದಾರೆ.
ಶತಾಯಿಷಿಯಾಗಿದ್ದ ಅವರು ರಕ್ತದೊತ್ತಡ, ಉಸಿರಾಟದ ತೊಂದರೆ, ಮೆದುಳು ರಕ್ತಸ್ರಾವ ಸೇರಿದಂತೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಫೆ.10 ರಿಂದ ಅವರು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆ ಇಂದು ಹಾವೇರಿ ತಾಲೂಕು ಹಲಗೇರಿಯಲ್ಲಿ ನಡೆಯಲಿದೆ.
ಮೊನಚು ಬರಹಗಳಿಗೆ ಹೆಸರಾಗಿದ್ದ ಪಾಟೀಲ ಪುಟ್ಟಪ್ಪ ಅವರು ‘ಪಾಪು’ ಎಂದೇ ಪ್ರಸಿದ್ಧರು. ಪತ್ರಕರ್ತರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕನ್ನಡಪರ ಹೋರಾಟಗಾರರಾಗಿ ಅವರು ನೀಡಿದ ಸೇವೆ ಅಮೋಘವಾದುದು.
ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ‘ನಾಡೋಜ’ ಪ್ರಶಸ್ತಿ, ಟಿಎಸ್ ಆರ್ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಪ್ರಶಸ್ತಿಗಳು ದೊರೆತಿವೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ನಾಡಿನ ಗಣ್ಯರು ಇವರ ಅಗಲುವಿಕೆಗೆ ಸಂತಾಪ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.