ನವದೆಹಲಿ: ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಪ್ರಕರಣಗಳು ದಿನದಿಂದ ದಿನಕ್ಕೆ ದೊಡ್ಡಮಟ್ಟದಲ್ಲಿ ಹೆಚ್ಚಳವಾಗುತ್ತಿದೆ. ಹೀಗಾಗಿ, ಸಾಂಕ್ರಾಮಿಕ ರೋಗದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಎರಡು ರಾಜ್ಯಗಳಿಗೆ ಸೂಚಿಸಿದ್ದಾರೆ.
ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳು ಕೊರೋನಾವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಸಿದ್ಧತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವ ಸಲುವಾಗಿ ಸಭೆ ನಡೆಸಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಗುಜರಾತಿನ ಉಪಮುಖ್ಯಮಂತ್ರಿ ಮತ್ತು ಮಹಾರಾಷ್ಟ್ರದ ಆರೋಗ್ಯ ಸಚಿವರು ಸೇರಿದಂತೆ ಹಲವಾರು ಅಧಿಕಾರಿಗಳು ಭಾಗವಹಿಸಿದ್ದರು.
ಎರಡು ರಾಜ್ಯಗಳು ಸಾಂಕ್ರಾಮಿಕ ರೋಗದ ಪ್ರಕರಣಗಳನ್ನು ಮತ್ತು ಸಾವಿನ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಅದರಲ್ಲೂ ಸಂಪರ್ಕ ಪತ್ತೆ ಮತ್ತು ನಿಗಾವನ್ನು ಪರಿಣಾಮಕಾರಿಯಾಗಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವರು ಸೂಚನೆಯನ್ನು ನೀಡಿದ್ದಾರೆ.
ಕೆಲವು ರೋಗಿಗಳು ರೋಗಲಕ್ಷಣಗಳು ಕಾಣಿಸಿಕೊಂಡರೂ ಕೂಡ ಆಸ್ಪತ್ರೆಗಳನ್ನು ಸಂಪರ್ಕಿಸಲು ವಿಳಂಬ ಮಾಡುತ್ತಿದ್ದಾರೆ. ಇದಕ್ಕೆ ಸಾಂಕ್ರಾಮಿಕ ರೋಗದ ಬಗ್ಗೆ ತಪ್ಪು ಕಲ್ಪನೆ ಕಾರಣ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.
ಇಂತಹ ತಪ್ಪು ಕಲ್ಪನೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ರಾಜ್ಯಗಳು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂಬ ಸಲಹೆಯನ್ನೂ ಸಚಿವರು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.