ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ ಅನೇಕ ನಿಯಂತ್ರಣ ಕ್ರಮಗಳನ್ನು ಜಾರಿಗೆ ತಂದಿದೆ. ಇದೀಗ ಫ್ಲಿಪ್ ಕಾರ್ಟ್ ಹಾಗೂ ಗೀವ್ ಇಂಡಿಯಾ ಸಂಸ್ಥೆಗಳು ಕೊರೋನಾ ವಿರುದ್ಧ ಹೋರಾಟಕ್ಕೆ ರಾಜ್ಯ ಸರ್ಕಾರದ ಜೊತೆಗೆ ಕೈ ಜೋಡಿಸಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪಿಪಿಇ ಕಿಟ್ಗಳನ್ನು ನೀಡಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕಂಪನಿಗಳ ಅಧಿಕಾರಿಗಳು, ಕೋವಿಡ್-19 ರ ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಬಳಕೆಗೆ ಪಿಪಿಇ ಕಿಟ್ಗಳನ್ನು ಉಚಿತವಾಗಿ ಹಸ್ತಾಂತರಿಸಿದ್ದಾರೆ. ಫ್ಲಿಪ್ ಕಾರ್ಟ್ ಮತ್ತು ಗೀವ್ ಇಂಡಿಯಾ ಕ್ರಮವಾಗಿ 2 ಲಕ್ಷ ಮತ್ತು 70,500 ಕಿಟ್ಗಳನ್ನು ಕೋವಿಡ್-19 ವಿರುದ್ಧದ ಹೋರಾಟಕ್ಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯ ಸರ್ಕಾರ ಕೊರೋನಾ ವಿರುದ್ಧ ಹೋರಾಟವನ್ನು ಸಮರ್ಥವಾಗಿ ನಿಭಾಯಿಸುತ್ತಿದೆ. ಹರಡುವಿಕೆ ತಡೆಗಟ್ಟಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಅಲ್ಲದೆ ಸಂತ್ರಸ್ತರಿಗೆ ಸಹಾಯವನ್ನೂ ಮಾಡುತ್ತಿದೆ. ಈ ಕಾರ್ಯದಲ್ಲಿ ಸರ್ಕಾರದ ಜೊತೆಗೆ ಸಂಘಸಂಸ್ಥೆಗಳು ಕೈ ಜೋಡಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದ್ದಾರೆ. ಈ ಪಿಪಿಇ ಕಿಟ್ಗಳು ಮುಂದಿನ ದಿನಗಳಲ್ಲಿ ಆರೋಗ್ಯ ರಕ್ಷಕರಿಗೆ ಉಪಯೋಗವಾಗಲಿದೆ ಎಂಬುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫ್ಲಿಪ್ ಕಾರ್ಟ್ ಸಿಇಒ ಕಲ್ಯಾಣ್ ಕೃಷ್ಣಮೂರ್ತಿ, ನಮ್ಮ ಸಂಸ್ಥೆಯ ಮೂಲ ಬೆಂಗಳೂರು. ಹಾಗಾಗಿ ರಾಜ್ಯದ ಸಂಕಷ್ಟದ ಸಂದರ್ಭದಲ್ಲಿ ಸಹಾಯ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ. ಜೊತೆಗೆ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಈ ವರೆಗೆ ತೆಗೆದುಕೊಂಡ ಕ್ರಮಗಳನ್ನು ಅವರು ಶ್ಲಾಘಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.