ಬೆಂಗಳೂರು: ಎಲ್ ಕೆ ಜಿ, ಯುಕೆಜಿ, ಒಂದರಿಂದ ಐದನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ರದ್ದು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆನ್ಲೈನ್ ಕಲಿಕೆ ಮಕ್ಕಳ ಆರೋಗ್ಯ ದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆ ಕಾರಣದಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಜ್ಞರು, ಖಾಸಗಿ ಶಾಲೆಗಳ ಪ್ರತಿನಿಧಿಗಳ ಜೊತೆಗೆ ಚರ್ಚೆ ನಡೆಸಿದ ಸುರೇಶ್ ಕುಮಾರ್ ಅವರು, ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಚಾರವನ್ನು ತಿಳಿಸಿದರು.
ರಾಜ್ಯದ ಪಠ್ಯಕ್ರಮ, ಸಿಬಿಎಸ್ಸಿ, ಐಸಿಎಸ್ಇ ಸೇರಿದಂತೆ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ಲೈನ್ ತರಗತಿ ನಡೆಸಬಾರದು. ಒಂದು ವೇಳೆ ನಡೆಸುತ್ತಿದ್ದರೆ ಅದನ್ನು ಕೂಡಲೇ ರದ್ದು ಮಾಡಬೇಕು. ಇನ್ನು ಆನ್ಲೈನ್ ಶಿಕ್ಷಣದ ಹೆಸರಿನಲ್ಲಿ ಯಾವುದೇ ರೀತಿಯ ಶುಲ್ಕ ಸಂಗ್ರಹವನ್ನು ಮಾಡುವಂತಿಲ್ಲ. ಇಂತಹ ಕ್ರಮ ಕಂಡು ಬಂದಲ್ಲಿ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸುರೇಶ್ ಕುಮಾರ್ ನೀಡಿದ್ದಾರೆ.
ಆನ್ಲೈನ್ ತರಗತಿಗಳು ಮಕ್ಕಳ ಮೆದುಳು ಮತ್ತು ಚಿಕ್ಕ ಮಕ್ಕಳ ಮೇಲೆ ಹೆಚ್ಚಿನ ಸಮಸ್ಯೆ ಉಂಟುಮಾಡುವ ಸಾಧ್ಯತೆ ಇರುವುದನ್ನು ಮನಗಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿಯೂ ಸಚಿವರು ಮಾಹಿತಿ ನೀಡಿದ್ದಾರೆ. ಜೊತೆಗೆ 6 ನೇ ತರಗತಿಯಿಂದ 10ನೇ ತರಗತಿಯವರೆಗೆ ಆನ್ಲೈನ್ ಶಿಕ್ಷಣ ನೀಡಬೇಕಾದರೆ, ಅದರ ಸಾಧಕ ಬಾಧಕಗಳನ್ನು ಪರಿಶೀಲನೆ ನಡೆಸುವಂತೆಯೂ ಅವರು ತಜ್ಞರ ಸಮಿತಿಗೆ ಸೂಚಿಸಿದ್ದಾರೆ. ಅದಕ್ಕಾಗಿ ಮಾರ್ಗಸೂಚಿ ರಚಿಸಲು ತಜ್ಞರ ತಂಡವನ್ನು ನೇಮಕ ಮಾಡಲಾಗಿದೆ. ನಿಮ್ಹಾನ್ಸ್ ಸಂಸ್ಥೆಯ ಮಾನಸಿಕ ತಜ್ಞರು, ಅರ್ಲಿ ಚೈಲ್ಡ್ ಹುಡ್ ಸಂಸ್ಥೆಯ ಪ್ರತಿನಿಧಿಗಳು, ಖಾಸಗಿ ಶಾಲಾ ಪ್ರತಿನಿಧಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನೊಳಗೊಂಡಂತೆ ಸಮಿತಿ ರಚಿಸಲಾಗಿದ್ದು, ಈ ಸಮಿತಿ 10 ದಿನಗಳಲ್ಲಿ ವರದಿ ನೀಡಲಿದೆ ಎಂದೂ ಅವರು ತಿಳಿಸಿದ್ದಾರೆ.
ಕೋವಿಡ್-19 ಪರಿಣಾಮದಿಂದಾಗಿ ಶಾಲಾ ಕಾಲೇಜುಗಳೂ ಬಾಗಿಲು ಹಾಕಿದ್ದು, ಹೀಗಾಗಿ ಶಾಲೆಗಳು ಆನ್ಲೈನ್ ಶಿಕ್ಷಣ ಪದ್ಧತಿಯನ್ನು ಅನುಸರಿಸುವ ಬಗ್ಗೆ ಮಾತುಗಳು ಕೇಳಿ ಬಂದಿತ್ತು. ಆದರೆ ಇದು ಮಕ್ಕಳ ಆರೋಗ್ಯ ಮತ್ತು ಮನಸ್ಸಿನ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಗಳಿರುವುದನ್ನು ಮನಗಂಡ ಪೋಷಕರೂ ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಸರ್ಕಾರ ಅದರ ಸಾಧಕ ಬಾಧಕಗಳನ್ನು ಪರಿಶೀಲಿಸಿ ಕೆಜಿ ಮಕ್ಕಳು, ಒಂದರಿಂದ ಐದನೇ ತರಗತಿಯ ಮಕ್ಕಳಿಗೆ ಆನ್ಲೈನ್ ತರಗತಿಯನ್ನು ರದ್ದುಗೊಳಿಸಿ ಆದೇಶ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.