ಬೆಂಗಳೂರು: ಕೌಶಲಾಭಿವೃದ್ಧಿ ಮತ್ತು ಉದ್ಯೋಗ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಜನರಿಗೆ ತರಬೇತಿ ನೀಡುವುದಕ್ಕೆ ರಾಜ್ಯ ಸರ್ಕಾರ ಆದ್ಯತೆ ನೀಡುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಸ್ಕಿಲ್ ಕನೆಕ್ಟ್ ಪೋರ್ಟಲ್ ಅನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದ ಜನರಿಗೆ ಪೂರಕವಾದ ಕೌಶಲಗಳ ತರಬೇತಿ ನೀಡುವ, ಹಾಗೆಯೇ ಉದ್ಯೋಗಾಕಾಂಕ್ಷಿಗಳಿಗೆ ತಮ್ಮ ಕೌಶಲಕ್ಕೆ ಪೂರಕವಾದಂತಹ ಉದ್ಯೋಗಗಳ ಕುರಿತ ಮಾಹಿತಿ ನೀಡುವ ನಿಟ್ಟಿನಲ್ಲಿ ಈ ಸ್ಕಿಲ್ ಕನೆಕ್ಟ್ ಪೋರ್ಟಲ್ ಅನ್ನು ಅಭಿವೃದ್ಧಿ ಮಾಡಲಾಗಿದೆ. ಇದು ತರಬೇತುದಾರರು, ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರ ನಡುವಿನ ಸೇತುವೆಯಂತೆಯೂ ಕಾರ್ಯನಿರ್ವಹಸಲಿದ್ದು ಯುವ ಜನರಿಗೆ ಸಹಾಯ ಮಾಡಲಿದೆ ಎಂದೂ ಅವರು ತಿಳಿಸಿದ್ದಾರೆ.
ಅಂತರಾಷ್ಟ್ರೀಯ ಸಂಸ್ಥೆಗಳು, ಸ್ಥಳೀಯ ಉದ್ಯಮಗಳು ಮತ್ತು ಸರ್ಕಾರದ ನಡುವಿನ ಕೊಂಡಿಯಾಗಿಯೂ ಈ ಪೋರ್ಟಲ್ ಕೆಲಸ ಮಾಡಲಿದೆ. ಯುವಜನತೆಗೆ ತಮ್ಮ ಕೌಶಲಗಳನ್ನು ಹೆಚ್ಚಿಸಿಕೊಳ್ಳಲು ಬೇಕಾದ ತರಬೇತಿ, ಪರಿಣತಿ ಹೊಂದಲು ಸರ್ಕಾರ ನಡೆಸುವ ಕಾರ್ಯಕ್ರಮಗಳ ಬಗ್ಗೆಯೂ ಈ ಪೋರ್ಟಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ಅಲ್ಲದೆ ಖಚಿತ ಉದ್ಯೋಗ ನೀಡುವ ನಿಟ್ಟಿನಲ್ಲಿ ಕೌಶಲ ತರಬೇತಿಗಳನ್ನು ನೀಡಲು ಮತ್ತು ಕೌಶಲಾಭಿವೃದ್ಧಿ ಗಾಗಿ 2 ಕೋಟಿ ರೂ. ಗಳ ವೆಚ್ಚದಲ್ಲಿ ಪ್ರತಿಭಾ ಉತ್ತೇಜನ ಕಾರ್ಯಕ್ರಮ ಅನುಷ್ಠಾನ ಮಾಡಲಾಗುವುದಾಗಿಯೂ ಅವರು ಈ ಸಂದರ್ಭ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.