ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ನಡುವೆ ಸೋಂಕಿತರಿಗೆ ಚಿಕಿತ್ಸೆ ನೀಡಲು ಹಾಸಿಗೆಗಳ ಅಲಭ್ಯತೆಯನ್ನೂ ಆಸ್ಪತ್ರೆಗಳು ಎದುರಿಸುತ್ತಿವೆ. ಈ ತಲೆನೋವನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಕೆಲ ದಿನಗಳ ಹಿಂದಷ್ಟೇ 10000 ಕ್ಕೂ ಅಧಿಕ ಹಾಸಿಗೆಗಳನ್ನು ಒಳಗೊಂಡ ಸುಸಜ್ಜಿತ ಕೊರೋನಾ ಕೇಂದ್ರವಾಗಿ ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ ಅನ್ನು ಬದಲಾಯಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.
ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಂಗಳೂರಿನ ಹೆಸರಾಂತ ಕ್ರೀಡಾಂಗಣ ಚಿನ್ನಸ್ವಾಮಿ ಮತ್ತು ಬೆಂಗಳೂರಿನ ಅರಮನೆ ಮೈದಾನಗಳನ್ನು ಕೋವಿಡ್ ಕೇರ್ ಸೆಂಟರ್ಗಳಾಗಿ ಪರಿವರ್ತನೆ ಮಾಡಲು ಮುಂದಾಗಿದೆ. ಈ ವಿಶಾಲ ಪ್ರದೇಶಗಳಲ್ಲಿ ಕೊರೋನಾ ಚಿಕಿತ್ಸೆಗೆ ಬೇಕಾದ ಹಾಸಿಗೆಗಳು, ಇನ್ನಿತರ ವೈದ್ಯಕೀಯ ಸೌಲಭ್ಯಗಳು ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ನೇಮಕ ಮಾಡುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಇನ್ನು ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 18952 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. ಆ ಮೂಲಕ ರಾಜ್ಯದಲ್ಲಿ ಈ ವರೆಗೆ ಸುಮಾರು 7 ಲಕ್ಷದ 60 ಸಾವಿರದಷ್ಟು ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.