ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆ ವಿದ್ಯಾರ್ಥಿಗಳೂ ಸಂಕಟ ಅನುಭವಿಸುವಂತಾಗಿದ್ದು, ಶಾಲಾರಂಭದ ಬಗ್ಗೆಯೂ ಗೊಂದಲಗಳು ಹರಿದಾಡುವಂತಾಗಿದೆ. ಇದೀಗ ವಿದ್ಯಾರ್ಥಿಗಳು ಮತ್ತು ಪೋಷಕರ ಆತಂಕಕ್ಕೆ ಪೂರ್ಣ ವಿರಾಮ ಹಾಕಿದೆ ರಾಜ್ಯ ಸರ್ಕಾರ. ಸದ್ಯದ ಸ್ಥಿತಿಯಲ್ಲಿ ಶಾಲಾರಂಭದ ಬಗ್ಗೆ ಸರ್ಕಾರ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳಾಗಬೇಕಿದ್ದು, ಈ ಆದ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಮನ ಹರಿಸಿರುವುದಾಗಿಯೂ ಸಚಿವರು ತಿಳಿಸಿದ್ದಾರೆ. ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಅಪೇಕ್ಷೆಗೆ ಅನುಗುಣವಾಗಿ ಕರ್ನಾಟಕದಲ್ಲಿ ಸೆಪ್ಟೆಂಬರ್ ನಲ್ಲಿ ಶಾಲೆಗಳು ತೆರೆಯುತ್ತವೆ ಎಂಬ ಸುದ್ದಿ ರಾಜ್ಯ ಸರ್ಕಾರದ ನಿರ್ಣಯವಲ್ಲ ಎಂದೂ ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಸದ್ಯ ರಾಜ್ಯದಲ್ಲಿ ಪರಿಸ್ಥಿತಿ ಸರಿಯಾಗಿಲ್ಲ. ಈ ಸಾಂಕ್ರಾಮಿಕ ಸ್ಥಿತಿಯಿಂದ ರಾಜ್ಯ ಹೊರಬಂದ ನಂತರವಷ್ಟೇ ಶಾಲಾರಂಭದ ಬಗ್ಗೆ ನಿರ್ಣಯಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ. ಆ ಬಳಿಕವಷ್ಟೇ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಲಿದ್ದಾರೆ. ಈ ಕುರಿತಂತೆ ಹರಡುವ ಯಾವುದೇ ಊಹಾಪೋಹ ಗಳನ್ನು ಮನಸ್ಸಿಗೆ ತೆಗೆದುಕೊಂಡು ಪೋಷಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದೂ ಶಿಕ್ಷಣ ಸಚಿವರು ಅಭಯ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.