ಬೆಂಗಳೂರು: ಕರ್ನಾಟಕ ಕೊರೋನಾ ಅಟ್ಟಹಾಸಕ್ಕೆ ತತ್ತರಿಸಿ ಹೋಗಿದೆ. ಕೊರೋನಾ ಸೋಂಕಿತರ ಚಿಕಿತ್ಸೆಯ ವಿಚಾರದಲ್ಲಿಯೂ ರಾಜ್ಯ ಅನೇಕ ಸವಾಲುಗಳನ್ನು ಎದುರಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷಾ ದರವನ್ನು ಇಳಿಕೆ ಮಾಡಿ ಆದೇಶ ಹೊರಡಿಸಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಸ್ವಯಂ ಪ್ರೇರಿತರಾಗಿ ಕೊರೋನಾ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವವರಿಗೆ 3000 ರೂ. ಮತ್ತು ಸರ್ಕಾರದಿಂದ ಶಿಫಾರಸ್ಸು ಪಡೆದು ಪರೀಕ್ಷೆ ಮಾಡಿಸಿಕೊಳ್ಳುವವರಿಗೆ 2000 ರೂ. ಗಳಿಗೆಪರೀಕ್ಷಾ ವೆಚ್ಚವನ್ನು ನಿಗದಿ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ. ಜೊತೆಗೆ ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿದಂತೆ 500 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿರುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದ 17 ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಸಂಬಂಧಿಸಿದಂತೆ 4,736 ಹಾಸಿಗೆಗಳಿಗೆ ಆಕ್ಸಿಜನ್ ಪೈಪ್ ವ್ಯವಸ್ಥೆ, ಇನ್ನಿತರ ಅಗತ್ಯ ಚಿಕಿತ್ಸಾ ಉಪಕರಣಗಳ ಖರೀದಿ ಸಂಬಂಧಿಸಿದಂತೆಯೂ ಅನುಮೋದನೆ ನೀಡಲಾಗಿರುವುದಾಗಿಯೂ ಸುಧಾಕರ್ ಮಾಹಿತಿ ನೀಡಿದ್ದಾರೆ. ಇನ್ನು ಕೊರೋನಾ ರೋಗಿಗಳ ಚಿಕಿತ್ಸೆಗೆ ಸಂಬಂಧಿಸಿದಂತೆಯೂ ಮಾತನಾಡಿರುವ ಅವರು, ಖಾಸಗಿ ಆಸ್ಪತ್ರೆಗಳು 50% ಹಾಸಿಗೆಗಳನ್ನು ಕೊರೋನಾ ರೋಗಿಗಳ ಚಿಕಿತ್ಸೆಗೆ ಕಡ್ಡಾಯವಾಗಿ ನೀಡಬೇಕು. ಉಳಿದಂತೆ 50% ಹಾಸಿಗೆಗಳನ್ನು ಆಸ್ಪತ್ರೆಗಳು ಇನ್ನಿತರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಬಳಕೆ ಮಾಡಬಹುದು ಎಂದೂ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.