ಬೆಂಗಳೂರು: ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದು ಬಿಜೆಪಿ ಸರ್ಕಾರ ಈಗಾಗಲೇ ಒಂದು ವರ್ಷ ಪೂರೈಸಿದ್ದು, ಇನ್ನುಳಿದ ಅವಧಿಯಲ್ಲಿಯೂ ಎಲ್ಲರ ಸಹಕಾರದ ಜೊತೆಗೆ ಸುಭದ್ರ ಆಡಳಿತವನ್ನು ನೀಡುವ ಭರವಸೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ್ದಾರೆ.
ಆಡಳಿತಕ್ಕೆ ಬಂದು ಒಂದು ವರ್ಷವಾದ ಹಿನ್ನೆಲೆಯಲ್ಲಿ, ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ‘ಸವಾಲುಗಳ ವರ್ಷ- ಪರಿಹಾರದ ಸ್ಪರ್ಶ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಿಜೆಪಿ ಸರ್ಕಾರದ ಗುರಿ. ಈ ನಿಟ್ಟಿನಲ್ಲಿ ನಮ್ಮ ನಿರಂತರ ಪ್ರಯತ್ನ ಸಾಗುತ್ತಿದೆ. ರಾಜ್ಯ ಬರಗಾಲಕ್ಕೆ ತುತ್ತಾಗಿದ್ದ ಸಂದರ್ಭದಲ್ಲಿ ನಾನು ಮುಖ್ಯಮಂತ್ರಿಯಾದೆ. ಆ ಸಮಸ್ಯೆಗೆ ಪರಿಹಾರ ಕಂಡುಕೊಂಡ ಬಳಿಕ ರಾಜ್ಯದಲ್ಲಿ ಪ್ರವಾಹ ಬಂತು. ಈ ಸಂದರ್ಭದಲ್ಲಿ ಸಂಪುಟ ರಚನೆಯಾಗಿರದೇ ಇದ್ದು, ಯಾರನ್ನೂ ಸಚಿವರಾಗಿ ನೇಮಿಸಿರದ ಕಾರಣ ತಾವೇ ಓಡಾಡಿ ಸಂತ್ರಸ್ಥರಿಗೆ ಪರಿಹಾರೋಪಾಯ ಕಂಡುಕೊಳ್ಳುವ ನಿಟ್ಟಿನಲ್ಲಿಯೂ ಪ್ರಯತ್ನಿಸಲಾಯಿತು ಎಂದು ತಿಳಿಸಿದರು.
ಪ್ರವಾಹದ ಸಮಸ್ಯೆ ಪರಿಹಾರ ಒಂದು ಹಂತಕ್ಕೆ ಬಂದು ನಿಂತಾಗ, ರಾಜ್ಯದಲ್ಲಿ ಕೊರೋನಾ ಎಂಬ ಮಹಾಮಾರಿ ಅಲ್ಲೋಲ ಕಲ್ಲೋಲ ಉಂಟು ಮಾಡಿತು. ಇದನ್ನು ಪರಿಹರಿಸಲು ಪೂರಕವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಲೇ ಇರುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. ಈ ಎಲ್ಲಾ ಸವಾಲುಗಳನ್ನು ನಿಭಾಯಿಸಿಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳುವುದು ಸುಲಭದ ಮಾತಲ್ಲ. ಆದರೂ ಅಭಿವೃದ್ಧಿ ನಿಟ್ಟಿನಲ್ಲಿ ಅಗತ್ಯ ಕೆಲಸಗಳನ್ನು ಸರ್ಕಾರ ಮಾಡಿದೆ ಎಂದೂ ತಿಳಿಸಿದ್ದಾರೆ.
ಈ ಸವಾಲುಗಳು ಅಭಿವೃದ್ಧಿಗೆ ಮಾರಕವಾಗಿ ಪರಿಣಮಿಸಿದೆ. ಇಂತಹ ಸವಾಲುಗಳಿಲ್ಲದೇ ಹೋಗಿದ್ದರೆ ರಾಜ್ಯ ಮತ್ತಷ್ಟು ಅಭಿವೃದ್ಧಿ ಹೊಂದುವಂತಾಗುತ್ತಿತ್ತು ಎಂದೂ ಯಡಿಯೂರಪ್ಪ ಹೇಳಿದ್ದಾರೆ. ಆದರೂ ಜನಸಾಮಾನ್ಯರನ್ನು ಗಮನದಲ್ಲಿಟ್ಟುಕೊಂಡು ಅನೇಕ ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳಲಾಗಿರುವುದಾಗಿಯೂ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಸಹಾಯ ಒದಗಿಸಿಕೊಟ್ಟ ಮೋದಿ ಸರ್ಕಾರಕ್ಕೂ ಅವರು ಧನ್ಯವಾದ ಸಮರ್ಪಿಸಿದ್ದಾರೆ.
ವಿರೋಧ ಪಕ್ಷಗಳ ಟೀಕೆಯ ನಡುವೆಯೂ ಸಮರ್ಥ ಆಡಳಿತ ನೀಡುವ, ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಲ್ಲಿ ಬಿಜೆಪಿ ಸಫಲವಾಗಿದೆ. ಮುಂದಿನ ದಿನಗಳಲ್ಲಿ 970 ಕಿಮೀ ರಾಷ್ಟ್ರೀಯ ಹೆದ್ದಾರಿ ಕಾರ್ಯ ಪೂರ್ಣಗೊಳಿಸಲಿರುವುದಾಗಿಯೂ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಜೊತೆಗೆ ಹೊಸ ಕೈಗಾರಿಕಾ ನೀತಿಯ ಮೂಲಕ ಮತ್ತಷ್ಟು ಅಭಿವೃದ್ಧಿ ಮಾಡಲಾಗುವುದಾಗಿಯೂ ಯಡಿಯೂರಪ್ಪ ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಯೇ ಬಿಜೆಪಿ ಸರ್ಕಾರದ ಕಾಳಜಿ ಎಂದೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.