ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರುಗಳಿಗೆ ಸೂಚಿಸಿದ್ದಾರೆ.
ಅನೇಕ ಜಿಲ್ಲೆಗಳಲ್ಲಿ ಪ್ರವಾಹದ ಭೀತಿಯೂ ಎದುರಾಗಿದ್ದು, ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸೂಕ್ತ ಪರಿಹಾರ ಕ್ರಮಗಳನ್ನು ನಡೆಸುವಂತೆ ತಿಳಿಸಿದ್ದಾರೆ. ಅಲ್ಲದೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಯಲ್ಲೇ ಇದ್ದುಕೊಂಡು, ಜನರಿಗೆ ಸಹಾಯವನ್ನು ಒದಗಿಸುವಂತೆಯೂ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ನೆರವಿಗಾಗಿ ಸರ್ಕಾರ 50 ಕೋಟಿ ರೂ. ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಅಗತ್ಯ ಬಿದ್ದರೆ ಮತ್ತಷ್ಟು ಪರಿಹಾರ ಧನ ಬಿಡುಗಡೆ ಮಾಡುವ ಭರವಸೆಯನ್ನೂ ನೀಡಿರುವ ಮುಖ್ಯಮಂತ್ರಿ, ತುರ್ತು ಸಂದರ್ಭಗಳಲ್ಲಿ ಸರ್ಕಾರಕ್ಕೆ ಕಾಯದೆ ತಾವೇ ಅಗತ್ಯ ತೀರ್ಮಾನಗಳನ್ನು ತೆಗೆದುಕೊಂಡು ಮುಂದುವರಿಯಬಹುದು ಎಂಬ ಅನುಮತಿಯನ್ನೂ ಉಸ್ತುವಾರಿ ಸಚಿವರಿಗೆ ನೀಡಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳ ಬಗೆಗೂ ಹವಾಮಾನ ಇಲಾಖೆ ವರದಿ ನೀಡಿದ್ದು, ಜನರು ಎಚ್ಚರಿಕೆಯಿಂದಿರುವಂತೆಯೂ ತಿಳಿಸಲಾಗಿದೆ. ಜೊತೆಗೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚನೆಯನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.