ಬೆಂಗಳೂರು: ಈ ಬಾರಿಯ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹಲವರು ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ, ಅವರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಕೊರೋನಾ ನಿಯಂತ್ರಣ ಕ್ರಮಗಳನ್ನು, ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಸಾರ್ವಜನಿಕವಾಗಿ ಹಬ್ಬ ಆಚರಿಸಲು ಸಮ್ಮತಿಸಿರುವುದಾಗಿ ತಿಳಿಸಿದ್ದಾರೆ.
‘ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪರಿಷ್ಕೃತ ಮಾರ್ಗಸೂಚಿಗಳ ಅನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ’ ಎಂದು ಟ್ವೀಟ್ ಮಾಡಿ ಪರಿಷ್ಕೃತ ಮಾರ್ಗಸೂಚಿಯ ಪ್ರತಿಯನ್ನು ಪ್ರಕಟಿಸಿದ್ದಾರೆ.
ಈ ಮಾರ್ಗಸೂಚಿಯಲ್ಲಿ, ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ತಮ್ಮ ಮನೆಗಳಲ್ಲಿ, ದೇವಸ್ಥಾನದ ಒಳಗೆ, ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯ ಭಕ್ತರೊಂದಿಗೆ ಆಚರಿಸಲು ಸರ್ಕಾರ ಸೂಚಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವವರು ಮೂರ್ತಿಯು 4 ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಪ್ರತಿಷ್ಠಾಪನೆ ಮಾಡುವವರು 2 ಅಡಿ ಮೀರದಂತೆ ಪ್ರತಿಷ್ಠಾಪನೆ ಮಾಡಬಹುದಾಗಿದೆ. ಪಾರಂಪರಿಕವಾಗಿ ಗಣೇಶೋತ್ಸವ ಮಾಡುವಲ್ಲಿ ಗಣೇಶೋತ್ಸವ ಸಮಿತಿ ಅಥವಾ ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಷನ್ ಅಥವಾ ಸ್ಥಳೀಯ ಆಡಳಿತದಿಂದ ಪೂರ್ವ ಅನುಮತಿಯನ್ನು ಪಡೆಯಬೇಕು. ಒಂದು ವಾರ್ಡ್ ಅಥವಾ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸಲು ಸರ್ಕಾರ ಸೂಚಿಸಿದೆ.
ಗಣೇಶೋತ್ಸವದ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಾಣ ಮಾಡಬೇಕು. ಒಂದು ಬಾರಿಗೆ 20 ಕ್ಕಿಂತ ಅಧಿಕ ಜನರು ಸೇರದಂತೆ ಭಕ್ತಾದಿಗಳಿಗೆ ದರ್ಶನಕ್ಕೆ ಅನುವು ಮಾಡಬೇಕು. ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹೀಗೆ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಎಂದು ಈ ಮಾರ್ಗಸೂಚಿಯಲ್ಲಿ ತಿಳಿಸಿದೆ. ಮೂರ್ತಿಗಳನ್ನು ತರುವಾಗ ಅಥವಾ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಯಾವುದೇ ಮೆರವಣಿಗೆ ನಡೆಸುವಂತಿಲ್ಲ ಎಂಬುದಾಗಿ ಸರ್ಕಾರ ಆದೇಶಿಸಿದೆ.
ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜನೆ ಮಾಡುವುದು ಮತ್ತು ಸರ್ಕಾರಿ ಅಥವಾ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪನ ಮಾಡಿವವರು ಗಣೇಶ ಮೂರ್ತಿಯನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ ಅಥವಾ ಜಿಲ್ಲಾಡಳಿತ ಅಥವಾ ಹತ್ತಿರದ ಸ್ಥಳೀಯ ಸಂಸ್ಥೆಗಳ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ, ಮೊಬೈಲ್ ಟ್ಯಾಂಕ್ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ಗಳಲ್ಲಿ ವಿಸರ್ಜಿಸಬೇಕು ಎಂದು ಸರ್ಕಾರ ಈ ಮಾರ್ಗಸೂಚಿಯಲ್ಲಿ ಸಾರ್ವಜನಿಕರಿಗೆ ಮನವಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.