ಬೆಂಗಳೂರು: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆಗಳಿಗೆ ಭೇಟಿ ನೀಡಿದ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಪರಿಸ್ಥಿತಿಯನ್ನು ವೈಮಾನಿಕ ಸಮೀಕ್ಷೆ ನಡೆಸಿ ಅವಲೋಕಿಸಿದರು.
ಬಳಿಕ ಹೆಲಿಕಾಪ್ಟರ್ ಮೂಲಕ ವಿಜಯಪುರ ಜಿಲ್ಲೆಯ ನಿಡಗುಂದಿಯ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳ ಸಚಿವರುಗಳು, ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳ ಜೊತೆಗೂ ಮಳೆ ಹಾನಿ ವಿಚಾರವಾಗಿ ಚರ್ಚೆ ನಡೆಸಿದರು. ಮಳೆ ಹಾನಿಯಿಂದಾಗಿ ಉಂಟಾಗಿರುವ ನಷ್ಟ, ಅಗತ್ಯವಿರುವ ಅನುದಾನಗಳ ಕುರಿತಾಗಿಯೂ ಮಾಹಿತಿಯನ್ನು ಸರ್ಕಾರಕ್ಕೆ ತಕ್ಷಣವೇ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಪ್ರವಾಹ ನಿರ್ವಹಣೆಗಾಗಿ ಮತ್ತು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲು 412 ಕೋಟಿ ರೂ. ಅನುದಾನ ಲಭ್ಯವಿದೆ. ಹೆಚ್ಚಿನ ಆರ್ಥಿಕ ಸಹಕಾರ ಬೇಕಾದಲ್ಲಿಯೂ ನೆರವು ನೀಡುವ ಭರವಸೆಯನ್ನು ಅವರು ನೀಡಿದ್ದಾರೆ. ಮನೆ ನಿರ್ಮಾಣ ಮಾಡುವ ಸಲುವಾಗಿ 174 ಕೋಟಿ ರೂ ಅನುದಾನ ಲಭ್ಯವಿದ್ದು, ಉಳಿದ ಹಣದಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇನ್ನಿತರ ಮಳೆ ಹಾನಿಗೊಳಗಾಗಿರುವ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಅನುದಾನ ಲಭ್ಯವಿದೆ. ಬೆಳಗಾವಿಯ ಮನೆ ಕಳೆದುಕೊಂಡ ಸಂತ್ರಸ್ಥರಿಗೆ 488 ಕೋಟಿ ರೂ. ಪರಿಹಾರ ಧನ ಬಿಡುಗಡೆ ಮಾಡಲಾಗಿದೆ. ಧಾರಾವಾಡ ಜಿಲ್ಲೆಗೆ ಸಂಬಂಧಿಸಿದಂತೆ ಕೊರೋನಾ ಸಂಕಷ್ಟದ ಆರ್ಥಿಕ ಸ್ಥಿತಿಯನ್ನು ಆಧರಿಸಿದಂತೆ ನೆರವು ನೀಡಲಾಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಬೆಳೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.
ಈ ಸಮೀಕ್ಷೆಯ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮೊದಲಾದವರು ಮುಖ್ಯಮಂತ್ರಿಗಳ ಜೊತೆಗಿದ್ದು ಪರಿಸ್ಥಿತಿ ಅವಲೋಕನ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.