
ಬೆಂಗಳೂರು: ಕೊರೋನಾ ಸೋಂಕು ವ್ಯಾಪಿಸದಂತೆ ನಿಯಂತ್ರಣ ಹೇರಲು ದೇಶದಾದ್ಯಂತ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಕ್ರಮಗಳನ್ನು ಸಡಿಲಗೊಳಿಸಲಾಗಿದ್ದು, ಕರ್ನಾಟಕದಲ್ಲಿಯೂ ಈ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಈ ವರೆಗೆ ನೆರೆಯ ರಾಜ್ಯಗಳಿಗೆ ಹೇರಲಾಗಿದ್ದ ಪ್ರವೇಶ ನಿಷೇಧ ಕ್ರಮವನ್ನು ಸಡಿಲಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಅಂತರರಾಜ್ಯ ಓಡಾಟವನ್ನು ಮತ್ತೆ ಆರಂಭ ಮಾಡುವ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಾಹಿತಿ ನೀಡಿದ್ದಾರೆ.
ರಾಜ್ಯದಿಂದ ಗೋವಾ, ಕೇರಳ, ತಮಿಳುನಾಡು, ತೆಲಂಗಾಣ, ಪಾಂಡಿಚೇರಿ ಮೊದಲಾದ ರಾಜ್ಯಗಳಿಗೆ ಲಾಕ್ಡೌನ್ ಸಂದರ್ಭದಲ್ಲಿ ಸ್ಥಗಿತಗೊಳಿಸಲಾದ ಸಾರಿಗೆ ಬಸ್ಸು ಸಂಚಾರ ಸೇವೆಯನ್ನು ಪುನರಾರಂಭ ಮಾಡುವುದಾಗಿಯೂ ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಮೊದಲಾದ ಸಾರಿಗೆ ಸಂಸ್ಥೆಗಳು ಪೂರಕ ತಯಾರಿ ನಡೆಸುತ್ತಿರುವುದಾಗಿಯೂ ಸವದಿ ಹೇಳಿದ್ದಾರೆ.
ಸಾರ್ವಜನಿಕರ ಪ್ರಯಾಣದ ಅನುಕೂಲಕ್ಕಾಗಿ ಈ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ನೆರೆಯ ರಾಜ್ಯಗಳಿಂದ ಸಮ್ಮತಿ ದೊರೆತ ತಕ್ಷಣವೇ ಅಂತರರಾಜ್ಯ ಸರ್ಕಾರಿ ಸಾರಿಗೆ ಸಂಚಾರ ಸೇವೆ ಆರಂಭ ಮಾಡುವುದಾಗಿಯೂ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



